ಮಕ್ಕಳಿಗೆ ಶಿಕ್ಷಣ ಕೊಡಿ, ಶಿಕ್ಷೆಯನ್ನಲ್ಲ-ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ಗಿರೀಶ್…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಮಕ್ಕಳಿಗೆ ಶಿಕ್ಷಣ ಕೊಡಿ, ಶಿಕ್ಷೆಯನ್ನಲ್ಲ-ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ಗಿರೀಶ್…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಕ್ಕಳನ್ನು ದುಡಿಸಿಕೊಳ್ಳಬಾರದು, ಅವರ ದುಡಿಮೆಯಿಂದ ಬದುಕಬಾರದು, ಮಕ್ಕಳಿಗೆ ಶಿಕ್ಷಣ ಸಿಗುವ ಹಾಗೇ ನೋಡಿಕೊಳ್ಳಬೇಕು ಇದು ಸಂವಿಧಾನದ ಆಶಯವಾಗಿದ್ದು, ಮಕ್ಕಳಿಗೆ ಶಿಕ್ಷಣ ಕೊಡಿ, ಶಿಕ್ಷೆಯನ್ನಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಕೆ.ಗಿರೀಶ್ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ (ರಿ), ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098 ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಅಪಾಯಕಾರಿ ಸಂಸ್ಥೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ದುಡಿಮೆಗೆ ನೇಮಕ ಮಾಡಿಕೊಳ್ಳಬಾರದು. ಬಾಲಕಾರ್ಮಿಕ ಪದ್ಧತಿಯು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾಗಳನ್ನು ನಡೆಸಲಾಗುತ್ತಿದೆ ಎಂದರು.
ಕಳೆದ ತಿಂಗಳು ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ
ಒಂಭತ್ತು ಜನ ಮಕ್ಕಳನ್ನು ರಕ್ಷಣೆ ಮಾಡಲಾಯಿತು. ಮಕ್ಕಳ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಪ್ರಭಾಕರ್ ಮಾತನಾಡಿ, ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರ) ಕಾಯ್ದೆ 1986ಕ್ಕೆ ತಿದ್ದುಪಡಿಯಾಗಿ, ಭಾರತ ಸರ್ಕಾರ 2016ರ ಜುಲೈ 30 ರ ಅಧಿಸೂಚನೆ ಪ್ರಕಾರ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯನ್ನು ಬಾಲಕಾರ್ಮಿಕರ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಎಂದು ತಿದ್ದುಪಡಿ ಮಾಡಲಾಗಿದ್ದು, ಈ ಕಾಯ್ದೆ ಪ್ರಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಸಂಪೂರ್ಣ ನಿಷೇಧಿಸಿದೆ. ಈ ಕಾನೂನು ಉಲ್ಲಂಘನೆ ಮಾಡಿದರೆ ಆರು ತಿಂಗಳಿಂದ 2 ವರ್ಷದವರೆಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದರು.
ಮಕ್ಕಳ ಸಂಕಟದಲ್ಲಿದ್ದರೆ ಉಚಿತ ಸಹಾಯವಾಣಿ 1098 ಕರೆ ಮಾಡಿ ನೆರವು ಪಡೆಯಬಹುದು. ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಲೆ, ಚಿತ್ರಮಂದಿರ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಪ್ರದರ್ಶಿಸಲಾಗಿದೆ. ಭಾರತ ಜನಸಂಖ್ಯೆಯಲ್ಲಿ ಶೇ.40ರಷ್ಟು ಮಂದಿ ಮಕ್ಕಳಿದ್ದಾರೆ. ಬಲಿಷ್ಟ ಹಾಗೂ ಸದೃಢದೇಶ ನಿರ್ಮಾಣ ಮಾಡಲು ಮಾನವ ಸಂಪನ್ಮೂಲ ಬಹಳ ಮುಖ್ಯ. ಮಕ್ಕಳಿಗೆ ರಕ್ಷಣೆ, ಪೌಷ್ಠಿಕ ಆಹಾರ, ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಮಿಕ ಅಧಿಕಾರಿ ಇಬ್ರಾಹಿಂ ಮಾತನಾಡಿ, ಬಾಲಕಾರ್ಮಿಕ ಪದ್ದತಿ ಅನಿಷ್ಠ ಪದ್ಧತಿಯಾಗಿದ್ದು, ಇದನ್ನು ನಿರ್ಮೂಲನೆ ಮಾಡಲು ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಘಗಳು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಹಕಾರ ಅಗತ್ಯವಾಗಿದೆ. ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.
ಜಾಗೃತಿ ಜಾಥಾಕ್ಕೆ ಚಾಲನೆ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಗಾಯತ್ರಿ ಸರ್ಕಲ್‍ನ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಿರೀಶ್ ಬಿ.ಕೆ ಚಾಲನೆ ನೀಡಿದರು. ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಚಾಲನೆ ನೀಡಿದರು.
ಜಾಗೃತಿ ಜಾಥಾ ಮತ್ತು ಬೈಕ್ ರ್ಯಾಲಿಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಂತರ ತರಾಸು ರಂಗಮಂದಿರ ತಲುಪಿತು. ಜಾಥಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ವಸತಿ ಶಾಲೆಯ ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಕಾರ್ಮಿಕ ಸಂಘಟನೆಗಳು, ಉದ್ಯೋಗದಾತರ ಸಂಘಗಳು, ಜನಪ್ರತಿನಿಧಿಗಳು ಮತ್ತು ವಿವಿಧ ಸಣ್ಣ ಕೈಗಾರಿಕಾ ಉದ್ಯಮಿಗಳು ಹಾಗೂ ಹೋಟೆಲ್ ಮಾಲೀಕರ ಸಂಘದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಜಿ.ಸಿ. ದಯಾನಂದ, ಪ್ರಾಧಾನ ಕಾರ್ಯದರ್ಶಿ ಎಂ. ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಎಸ್ ಬಣಕಾರ್, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ.ಸತೀಶ್‍ಕುಮಾರ್, ಕಾರ್ಮಿಕ ಇಲಾಖೆ ವಿಷಯ ನಿರ್ವಾಹಕ ತೀರ್ಥ ಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0