ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಯುವ ಜನರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸುವ ಕ್ರೌರ್ಯ ಮೆರೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಕೆಪಿಎಸ್ಸಿ ಯಡವಟ್ಟುಗಳ ವಿರುದ್ಧ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ಕಠಿಣ ಪರಿಶ್ರಮದಿಂದ ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಅಲ್ಲದೇ ಕೆಎಎಸ್ ಪರೀಕ್ಷೆಯ ಪ್ರಶ್ನೆಗಳನ್ನು ಮಾತೃ ಭಾಷೆ ಕನ್ನಡಕ್ಕೆ ಭಾಷಾಂತರ ಮಾಡುವಲ್ಲಿಯೂ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ ಹಾಊಕೆಪಿಎಸ್ಸಿಯ ನಿರಂತರ ಹುಳುಕುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಉದ್ಯೋಗಾಕಾಂಕ್ಷಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಧೀರಾಜ್ ಮುನಿರಾಜ್, ಪಕ್ಷದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ದಲಿತ ಮುಖಂಡರಾದ ವೆಂಕಟಸ್ವಾಮಿ, ಮಾರಸಂದ್ರ ಮುನಿಯಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಸಾವಿರಾರು ಉದ್ಯೋಗಾಕಾಂಕ್ಷಿ ಯುವ ಮಿತ್ರರು ಉಪಸ್ಥಿತರಿದ್ದರು.