ದೇವೇಗೌಡರು ಅಂದಿನ ಪ್ರಧಾನಿ ಚಂದ್ರಶೇಖರ್ ಅವರನ್ನು ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಅಂದು ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement - 

ವಾಲ್ಮೀಕಿ, ಬೇಡ ಮತ್ತು ನಾಯಕ‌ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement - 

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು.
ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ನಾಯಕ ಸಮುದಾಯದ ಶಾಸಕರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಗಣಿಸಲಾಗುವುದು.

ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವುದನ್ನು ಸ್ವತಃ ಮುಖ್ಯ ನ್ಯಾಯಮೂರ್ತಿಯವರೇ ಕ್ಷಮಿಸಿದ್ದಾರೆ. ಇದು ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇದರಲ್ಲಿ ಮನುವಾದಿಗಳ ಕೈವಾಡವಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಐವರು ಗಣ್ಯರಿಗೆ 2025ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ, ಗೌರವಿಸಿದರು.

Share This Article
error: Content is protected !!
";