ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಕ್ಟೋಬರ್ 02ರಂದು ಜಿಲ್ಲಾ ಕೇಂದ್ರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತಾ ಕ್ರಮಕೈಗೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಗಾಂಧೀಜಿ ಜಯಂತಿ ಆಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಗಾಂಧೀಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಗೌರವ ಸಮರ್ಪಿಸುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಜಯಂತಿ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು. ಇದರ ಜೊತೆಗೆ ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಜಯಂತಿ ಕಾರ್ಯಕ್ರಮವನ್ನು ಅಚರಿಸಬೇಕು ಎಂದು ಹೇಳಿದರು.
ನಗರಸಭೆ ವತಿಯಿಂದ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಅಲಂಕರಿಸುವ ಕಾರ್ಯ ಆಗಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಗೀತೆ ಹಾಗೂ ಗಾಂಧೀಜಿಯವರ ಪ್ರಿಯ ಭಜನೆಗಳು ಹಾಗೂ ಗೀತೆಗಳ ಗಾಯನ ಏರ್ಪಾಡು ಮಾಡಬೇಕು. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಆಯೋಜಿಸಬೇಕು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜೀವನ ಸಾಧನೆ ಕುರಿತು ಉಪನ್ಯಾಸಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರಥಮ ಸ್ಥಾನ ಪಡೆದ ಪ್ರಬಂಧಗಳನ್ನು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕಿ ಹೆಚ್.ಎಸ್.ಶಾಂತಮ್ಮ, ಜಿಲ್ಲಾ ನಗರಾಭಿವೃದ್ಧಿ ಕೋಶ ವ್ಯವಸ್ಥಾಪಕಿ ರೇಣುಕಾ, ನಗರಸಭೆಯ ಸಮುದಾಯ ಸಂಘಟಕಿ ಸಿ.ಸರಳ, ಪದವಿಪೂರ್ವ ಶಿಕ್ಷಣ ಇಲಾಖೆಯ ಎನ್.ಅಶೋಕ್ ಇದ್ದರು.




