ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರು ಹಾಗೂ ಕಾರ್ಯಕರ್ತರ ಸಭೆಯು ಇಂದು ಯಶಸ್ವಿಯಾಗಿ ಆಯೋಜನೆಗೊಂಡಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಶಿಕ್ಷಕ ವೃಂದದವರ ಆಶೋತ್ತರಗಳು, ನ್ಯಾಯಯುತ ಬೇಡಿಕೆಗಳು ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.
ಶಿಕ್ಷಕರ ಹಿತರಕ್ಷಣೆಯ ದೃಢ ಬದ್ಧತೆಯೊಂದಿಗೆ ಕಣಕ್ಕಿಳಿದಿರುವ ಎನ್ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಶ್ರೀ ಎ.ಪಿ. ರಂಗನಾಥ್ ಅವರ ಗೆಲುವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಬೂತ್ ಹಾಗೂ ಕ್ಷೇತ್ರ ಮಟ್ಟದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ವಿಸ್ತೃತ ಸಮಾಲೋಚನೆ ನಡೆಸಲಾಯಿತು.
ಈ ಮಹತ್ವದ ಸಭೆಯಲ್ಲಿ ಪಕ್ಷದ ರಾಜ್ಯ ಸಹ-ಉಸ್ತುವಾರಿಗಳಾದ ಡಾ. ಕಾಸಂ ವೆಂಕಟೇಶ್ವರಲು, ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ಬಿ.ಎ. ಬಸವರಾಜ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಕೆ. ಗೋಪಾಲಯ್ಯ, ಎಸ್. ಮುನಿರಾಜು, ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಸ್. ಗೋಪಿನಾಥ್ ರೆಡ್ಡಿ, ಕೇಶವ ಪ್ರಸಾದ್, ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್ ಸೇರಿದಂತೆ ಹಲವು ಪ್ರಮುಖ ಎನ್ಡಿಎ ನಾಯಕರು ಉಪಸ್ಥಿತರಿದ್ದರು.




