ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಹಾಲಿನ ಬೆಲೆ ಏರಿಕೆ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯ ಸರ್ಕಾರವು ಏರಿಸಿರುವ ಎಲ್ಲ ದರಗಳನ್ನು ತಕ್ಷಣವೇ ಕಡಿಮೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು, ಇಲ್ಲವಾದರೆ ಅಧಿಕಾರ ತೊರೆಯಬೇಕು ಎಂದು ಆಗ್ರಹಿಸಿದರು.
ಕಷ್ಟಪಟ್ಟು ದುಡಿಯುವ ಸಾಮಾನ್ಯ ಜನರಿಗೆ, ಆಟೋ ಚಾಲಕರಿಗೆ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ವಿದ್ಯುತ್, ನೀರು ಹಾಗೂ ಹಾಲಿನ ದರ ಏರಿಕೆಯಿಂದ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿದ್ದ 4,000 ಹಣವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಬರ ಪರಿಹಾರವಾಗಿ ನೀಡುತ್ತಿರುವ 2,500 ನೀಡಲು ಹತ್ತಾರು ಷರತ್ತುಗಳನ್ನು ವಿಧಿಸಲಾಗಿದೆ ಎಂದು ಟೀಕಿಸಿದರು. ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ಹಣದ ಲೆಕ್ಕ ಸಿಗುತ್ತಿಲ್ಲ ಹಾಗೂ ಕೆಎಸ್ಆರ್ಟಿಸಿ ಬಸ್ಗಳ ನಿರ್ವಹಣೆಗೂ ಹಣವಿಲ್ಲದೆ ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ವಿಧಾನಪರಿಷತ್ ಮಾಜಿ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಖಜಾನೆಯಿಂದ ಹಾಲಿಗೆ ಸಬ್ಸಿಡಿ ನೀಡುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರವು ಹಾಲಿನ ದರವನ್ನು ಹಂತ-ಹಂತವಾಗಿ ಏರಿಕೆ ಮಾಡುವ ಮೂಲಕ ಜನರಿಗೆ 'ಶಾಕ್ ಟ್ರೀಟ್ಮೆಂಟ್' ನೀಡುತ್ತಿದೆ ಎಂದು ಕಿಡಿಕಾರಿದರು. ಈ ಬೆಲೆ ಏರಿಕೆ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಮತ್ತು ವಾರ್ಡ್ಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದರು.




