ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕಾಂಗ್ರೆಸ್ ಪಕ್ಷದ ವಿಭಜನಾತ್ಮಕ ಸಿದ್ಧಾಂತ, ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಶಿವಮೊಗ್ಗ ವಿಭಾಗದ ವತಿಯಿಂದ ನಗರದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ - ಅರಾಜಕತೆ ತೊಲಗಿಸಿ’ ಬೃಹತ್ ಪಾದಯಾತ್ರೆ ಆಯೋಜಿಸಲಾಗಿತ್ತು. ಈ ಪ್ರತಿಭಟನಾ ಪಾದಯಾತ್ರೆಯಲ್ಲಿ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಸಿ.ಟಿ. ರವಿ ಅವರು ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಸಂಪೂರ್ಣವಾಗಿ ಮಾಯವಾಗಿದೆ. ಬೆಲೆ ಏರಿಕೆ, ರೈತರ ಸಂಕಷ್ಟ ಹಾಗೂ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರ್ಕಾರ ರಾಜಕೀಯ ನಾಟಕವಾಡುತ್ತಿದೆ.
ಇವಿಎಂ ನೆಪಕ್ಕೆ ತಿರುಗೇಟು: ಚುನಾವಣೆಗಳಲ್ಲಿ ಸೋತಾಗಲೆಲ್ಲಾ ಇವಿಎಂ ಮೇಲೆ ಗೂಬೆಕೂರಿಸುವುದು ಕಾಂಗ್ರೆಸ್ಗೆ ಅಭ್ಯಾಸವಾಗಿದೆ. ಇವಿಎಂ ಮೇಲೆ ನಂಬಿಕೆ ಇಲ್ಲದಿದ್ದರೆ ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ, ಬ್ಯಾಲೆಟ್ ಪೇಪರ್ ಮೂಲಕ ಮರುಚುನಾವಣೆಯನ್ನು ಎದುರಿಸಲಿ ಎಂದು ಸವಾಲು ಹಾಕಿದರು.
ಜನರ ಬೆಂಬಲ ಬಿಜೆಪಿಗೆ: ದೇಶದ ಜನತೆ ಸದಾ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್ಪಕ್ಷಕ್ಕೆ ಸಾರ್ವಜನಿಕರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಈ ಬೃಹತ್ ಪಾದಯಾತ್ರೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಪಕ್ಷದ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಶಿವಮೊಗ್ಗ ವಿಭಾಗ ಪ್ರಭಾರಿ ಆರ್.ಕೆ. ಸಿದ್ದರಾಮಣ್ಣ, ಪ್ರಮುಖ ನಾಯಕರಾದ ಜಗದೀಶ್, ನಾರಾಯಣ ಹೆಗಡೆ ಸೇರಿದಂತೆ ಹಲವು ಹಿರಿಯ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.




