ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 24 ವರ್ಷದ ಯುವಕನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 6.84 ಲಕ್ಷ ರೂಪಾಯಿ ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-1) ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ವಿವರ: ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರಿನನ್ವಯ ತೀರ್ಥಹಳ್ಳಿ ಠಾಣೆಯ ಅಂದಿನ ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪ್ರಕರಣ ದಾಖಲಿಸಿಕೊಂಡು, ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರಿಕೆ ಸಲ್ಲಿಕೆ ಮಾಡಿದ್ದರು.
ನ್ಯಾಯಾಲಯದ ತೀರ್ಪು: ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ ಅವರು, ಆರೋಪಿ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹6.84 ಲಕ್ಷ ದಂಡ ವಿಧಿಸಲಾಗಿದೆ.
ಬಾಲಕಿಗೆ ₹10 ಲಕ್ಷ ಪರಿಹಾರ: ದಂಡದ ಮೊತ್ತದಲ್ಲಿ ₹6 ಲಕ್ಷ ಹಾಗೂ ರಾಜ್ಯ ಸರ್ಕಾರದಿಂದ ₹4 ಲಕ್ಷ ಸೇರಿ ಒಟ್ಟು ₹10 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಶ್ರೀಧರ್ ಅವರು ವಾದ ಮಂಡಿಸಿದ್ದರು.




