ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.ದೆಹಲಿಯಲ್ಲಿ CWRC ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ ಎರಡು ವಾರಗಳ ಕಾಲ ತಮಿಳುನಾಡಿಗೆ ನಿತ್ಯ ನಿರ್ದಿಷ್ಟ ಪ್ರಮಾಣದ ನೀರನ್ನು ಹರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈಗಾಗಲೇ ಮಳೆ ಕೊರತೆ ಹಾಗೂ ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಈ ತೀರ್ಮಾನವು ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ತಮಿಳುನಾಡಿನ ಅಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ:
ಸಿಡಬ್ಲ್ಯೂಆರ್ಸಿ ತಮಿಳುನಾಡಿಗೆ ನೀರು ಹರಿಸಲು ಶಿಫಾರಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ಕಾವೇರಿ ಜಲಾಶಯಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಒಳಹರಿವು ಕಡಿಮೆಯಾಗಿದೆ. ರಾಜ್ಯದಲ್ಲಿ ಮಳೆಯೂ ಸರಿಯಾಗಿ ಬರುತ್ತಿಲ್ಲ, ನಮ್ಮ ಮೇಲೆ ತೀವ್ರ ಒತ್ತಡವಿದೆ. ಹೀಗಾಗಿ ಸಿಡಬ್ಲ್ಯೂಆರ್ಸಿ ಶಿಫಾರಸನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ಈ ಕುರಿತು ಸಂಜೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು" ಎಂದು ತಿಳಿಸಿದ್ದಾರೆ.




