ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಾಂಗ್ರೆಸ್ ಸರ್ಕಾರದ ದುರಾಡಳಿತ, ಸರಣಿ ಭ್ರಷ್ಟಾಚಾರ ಹಾಗೂ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಅನುಸರಿಸುತ್ತಿರುವ ಪ್ರಜಾಪ್ರಭುತ್ವ ವಿರೋಧಿ ನೀತಿಗಳನ್ನು ಖಂಡಿಸಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಿಜೆಪಿ ವತಿಯಿಂದ 'ಪ್ರಜಾಪ್ರಭುತ್ವ ಉಳಿಸಿ - ಅರಾಜಕತೆ ಅಳಿಸಿ' ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಅವರು, ರಾಜ್ಯದಲ್ಲಿ ಬೆಲೆ ಏರಿಕೆ ಹಾಗೂ ಬರಗಾಲದಿಂದ ಜನಸಾಮಾನ್ಯರು ತತ್ತರಿಸುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯವನ್ನು ಮುಚ್ಚಿಹಾಕಲು ನಿರಂತರ ರಾಜಕೀಯ ನಾಟಕವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾಡಿನ ಸಂಪತ್ತನ್ನು ಲೂಟಿ ಮಾಡುತ್ತಾ ರಾಷ್ಟ್ರಹಿತವನ್ನು ಕಡೆಗಣಿಸುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಿದೆ. ಸದಾ ಸುಳ್ಳು ಹೇಳುತ್ತಾ ಜನರನ್ನು ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುವ ಮೂಲಕ ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ನಿಲ್ಲಲಿದ್ದಾರೆ ಎಂದು ಹೇಳಿದರು.
ಈ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀವತ್ಸ, ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್, ಎಂಎಲ್ಸಿ ರಘು ಕೌಟಿಲ್ಯ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮಲ್ಲಿಕಾರ್ಜುನಪ್ಪ, ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಪ್ರೀತಂಗೌಡ, ನಾಯಕರುಗಳು ಹಾಗೂ ವಿವಿಧ ಜಿಲ್ಲೆಗಳ ಅಧ್ಯಕ್ಷರು, ಸಾವಿರಾರು ಸಂಖ್ಯೆಯ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.




