ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಇಲಾಖೆಗಳ 8 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.
ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕೋಟ್ಯಂತರ ರೂ. ಮೌಲ್ಯದ ಸ್ಥಿರ ಹಾಗೂ ಚರ ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.
ದಾಳಿಗೊಳಗಾದ ಅಧಿಕಾರಿಗಳ ಪಟ್ಟಿ:
ದರ್ಶನ್ ಗೌಡ: ಪ್ರಥಮ ದರ್ಜೆ ಸಹಾಯಕ, ಜಿಲ್ಲಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ.
ರಂಗನಾಥ್ ಹೆಚ್.ಎಂ: ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಬಿಬಿಎಂಪಿ, ಬೆಂಗಳೂರು.
ಶ್ರೀದೇವಿ: ಜಿಲ್ಲಾ ನೋಂದಣಾಧಿಕಾರಿ, ಬೆಂಗಳೂರು.
ಹೆಚ್.ಆರ್. ರಮೇಶ್: ಪೌರಾಯುಕ್ತರು, ನಗರಸಭೆ, ಮಡಿಕೇರಿ.
ಕಿರಣ್ ಕುಮಾರ್ ಬೈಂದೂರ್: ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಹೆಸ್ಕಾಂ, ಹುಬ್ಬಳ್ಳಿ-ಧಾರವಾಡ.
ರಾಜೇಶ್ವರಿ: ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಜೆಸ್ಕಾಂ, ಕಲಬುರಗಿ.
ಮಾಣಿಕ್ ರಾವ್: ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ಬೀದರ್.
ಶಿವರಾಜು: ಹಾಸ್ಟೆಲ್ ಸೂಪರಿಂಟೆಂಡೆಂಟ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಡ್ಯ.
ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕುರಿತು ಸಾರ್ವಜನಿಕರಿಂದ ಹಾಗೂ ವಿವಿಧ ಮೂಲಗಳಿಂದ ದೂರುಗಳು ಬಂದಿದ್ದವು.
ಇದರ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಸದ್ಯ ವಿವಿಧ ತಂಡಗಳಿಂದ ಶೋಧ ಕಾರ್ಯ ಮುಂದುವರಿದಿದ್ದು, ದಾಖಲಾತಿಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಅಧಿಕೃತ ಮಾಹಿತಿ ಹೊರಬೀಳಲಿದೆ.




