ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲೂಕಿನಲ್ಲಿ ಸರ್ಕಾರದ ಗೋಮಾಳ ಜಮೀನುಗಳಿಗೆ ಹಕ್ಕುಪತ್ರ ನೀಡಿ, ಬಡವರು ಸೂರು ಕಲ್ಪಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ನಿರಾಶ್ರಿತರು ಉಗ್ರ ಹೋರಾಟಕ್ಕೆ ಮುಂದಾಗಿದ್ದಾರೆ.
2007ರಲ್ಲಿಯೇ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೆ ಅಧಿಕಾರಿಗಳು ಯಾವುದೇ ಸಕಾರಾತ್ಮಕ ಸ್ಪಂದನೆ ನೀಡಿಲ್ಲ. ಇದರಿಂದ ನೊಂದ ಬಡ ನಿರಾಶ್ರಿತರು ಅನಿವಾರ್ಯವಾಗಿ ಉಗ್ರ ಹೋರಾಟದ ಹಾದಿ ಹಿಡಿಯಬೇಕಾಯಿತು ಎಂದು ಹೋರಾಟಗಾರರು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯಪಾಲರ ಕಚೇರಿಯಿಂದ 30 ಎಕರೆ ಜಾಗವನ್ನು ಮಂಜೂರು ಮಾಡಿಕೊಡುವಂತೆ ಆದೇಶ ಹೊರಡಿಸಲಾಗಿತ್ತು. ಈ ಆದೇಶದನ್ವಯ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದರು. ಪ್ರತಿಭಟನಾಕಾರರ ಒತ್ತಾಯದ ಮೇರೆಗೆ ಜಾಗ ಗುರುತಿಸಿ ಸರ್ವೆ ಮಾಡಲು ಸೂಚಿಸಲಾಯಿತಾದರೂ, ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಡವರಿಗೆ ನೆರಳಾಗಲು ಈ 30 ಎಕರೆ ಜಾಗದಲ್ಲಿ ಸುಸಜ್ಜಿತ ಲೇಔಟ್ ನಿರ್ಮಿಸಿಕೊಡಬೇಕು. ಈ ಕುರಿತು ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಎದುರೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.




