ಚಂದ್ರವಳ್ಳಿ ನ್ಯೂಸ್, ಕೋಲಾರ:
ಇಡೀ ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಸ್ವರೂಪದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಕೋಲಾರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆ ವೇಳೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ. ಒಂದು ವೇಳೆ ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿದ್ದೇ ಆದಲ್ಲಿ, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಲಿದ್ದಾರೆ" ಎಂದು ಕಡಕ್ ಎಚ್ಚರಿಕೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವ ಕಾಂಗ್ರೆಸ್: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಅರಾಜಕತೆಗೆ ಪ್ರಚೋದನೆ ನೀಡಲು ಕಾಂಗ್ರೆಸ್ ಯುವಜನರನ್ನು ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಕೋಲಾರದಲ್ಲಿ ಈ ಬೃಹತ್ ಪಾದಯಾತ್ರೆಯನ್ನು ಸಂಘಟಿಸಲಾಗಿತ್ತು.
ಬೃಹತ್ ಪಾದಯಾತ್ರೆಯಲ್ಲಿ ಪ್ರಮುಖ ನಾಯಕರ ಭಾಗಿ: ಬಿಜೆಪಿ ಆಯೋಜಿಸಿದ್ದ ಈ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವು ಪ್ರಮುಖ ನಾಯಕರು ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನ ನಡೆಸಿದರು.
ಈ ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಹರೀಶ್ ದ್ವಿವೇದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್,
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.




