ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಕಳೆದ ಚುನಾವಣೆಯ ಮತಗಳ ಲೆಕ್ಕಾಚಾರ ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಕ್ಷೇತ್ರದ ಮೇಲೆ ಹಕ್ಕು ಮಂಡಿಸುತ್ತಿರುವುದು ಟಿಕೆಟ್ ಹಂಚಿಕೆಯನ್ನು ಕಗ್ಗಂಟಾಗಿಸಿದೆ. ಈ ಬೆಳವಣಿಗೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ತಲುಪಿದೆ.
ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ಗೆ ಟಿಕೆಟ್ ನೀಡುವ ವಿಚಾರವಾಗಿ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಕುತೂಹಲ ಮೂಡಿಸಿದೆ.




