ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಕನ್ನಡ ರಾಜ್ಯೋತ್ಸವವು ಕೇವಲ ಸಂಭ್ರಮಾಚರಣೆಗೆ ಸೀಮಿತವಾಗದೆ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ಸಂಕಲ್ಪದ ದಿನವಾಗಬೇಕು ಎಂದು ಕೊಟ್ರೆ ನಂಜಪ್ಪ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಡಾ. ಜಿ.ವಿ. ಮಂಜುನಾಥ್ ಹೇಳಿದರು.
ಪಟ್ಟಣದ ಸಂವಿಧಾನ ಸೌಧದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಅವರು, "ಬಸವಾದಿ ಶರಣರ ವಚನ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ಕುವೆಂಪು, ಬೇಂದ್ರೆ ಸೇರಿದಂತೆ ಅನೇಕ ಸಾಹಿತಿಗಳ ಕೊಡುಗೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಂಡಿದೆ. ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಕನ್ನಡ ರಾಷ್ಟ್ರಮಟ್ಟದಲ್ಲಿ ಗೌರವ ಪಡೆದಿದೆ," ಎಂದು ಸ್ಮರಿಸಿದರು.
ಕನ್ನಡ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಡೆಪ್ಯೂಟಿ ಚೆನ್ನಬಸಪ್ಪ, ಡಾ. ಚನ್ನಬಸವ ಪಟ್ಟದ್ದೇವರು, ಎಸ್. ನಿಜಲಿಂಗಪ್ಪ, ಡಿ. ದೇವರಾಜ ಅರಸು ಸೇರಿದಂತೆ ಹಲವು ಮಹನೀಯರ ತ್ಯಾಗವನ್ನು ಸ್ಮರಿಸಿದ ಅವರು, ಕನ್ನಡಿಗರು ದೈನಂದಿನ ಬದುಕಿನಲ್ಲಿ ಕನ್ನಡವನ್ನು ಗೌರವಿಸಿ, ಮುಂದಿನ ಪೀಳಿಗೆಗೆ ಅದರ ವೈಭವವನ್ನು ಪರಿಚಯಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಜಯಕುಮಾರ್ ಕೊರಲಗುಂದಿ, ವೃತ್ತ ನಿರೀಕ್ಷಕ ಶ್ರೀಶೈಲ ಬಿ. ಚೌಗೂಲಾ, ತಾಲೂಕು ಪಂಚಾಯಿತಿ ಇಒ ಎಸ್. ಶಿವಪ್ರಕಾಶ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಗಣ್ಯರು, ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




