ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಮತದಾರರ ದಿನಾಚರಣೆ–2027ರ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಮಟ್ಟದ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಜಿಲ್ಲೆಯ ಆರು ತಾಲ್ಲೂಕುಗಳಿಂದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಹಂತದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಸಲಾಯಿತು.
‘ಶುದ್ಧ ಮತದಾರರ ಪಟ್ಟಿಯ ಮಹತ್ವ’ ಅಥವಾ ‘ಮತದಾನದ ಮಹತ್ವ’ ಎಂಬ ಎರಡು ವಿಷಯಗಳಲ್ಲಿ ಯಾವುದಾದೊಂದು ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಒಟ್ಟು 25 ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೆ ಒಂದು ನಿಮಿಷದ ಸಮಯ ನಿಗದಿಪಡಿಸಿ, “ಮತದಾರರ ಪಟ್ಟಿ ಸಿದ್ಧಪಡಿಸುವಿಕೆ, ಇವಿಎಂ ಮತ್ತು ವಿವಿಪ್ಯಾಟ್, ಮತದಾನ ಪ್ರಕ್ರಿಯೆ ಹಾಗೂ ಮತ ಎಣಿಕೆ ಪ್ರಕ್ರಿಯೆ ಕುರಿತು ಲೈವ್ ಕ್ವಿಜ್ ಮಾದರಿಯಲ್ಲಿ ಪ್ರಶ್ನೆಗಳನ್ನು ಕೇಳಲಾಯಿತು.
ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಮುಂದಿನ ಹಂತವಾಗಿ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು. ಜತೆಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರಿಗೆ 2027ರ ಜನವರಿ 25ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಪ್ರಮಾಣಪತ್ರ ವಿತರಿಸಲಾಗುವುದು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಉಪ ಯೋಜನಾಧಿಕಾರಿ ಸುಮಾ, ಶಿಕ್ಷಕರಾದ ಹುಲಿಕುಂಟೇರಾಯಪ್ಪ, ಚಾಪೆ ರೇವಣ್ಣ, ಹಾಲೇಶ್, ಭೀಮರೆಡ್ಡಿ, ಶ್ರೀನಿವಾಸ್, ಎಸ್.ಕೃಷ್ಣ ಹಾಗೂ ಕೃಷ್ಣಮೂರ್ತಿ ಇದ್ದರು.




