ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ, ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹಾಸನ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರ ರಾತ್ರೋರಾತ್ರಿ ಅವುಗಳನ್ನು ಭದ್ರಾ ಅಭಯಾರಣ್ಯದತ್ತ ಓಡಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ನಯನಾ ಮೋಟಮ್ಮ, "ನನಗೆ ಸರ್ಕಾರಕ್ಕಿಂತ ನನ್ನ ಕ್ಷೇತ್ರದ ಜನ ಮುಖ್ಯ, ಆನೆಗಳನ್ನು ವಾಪಸ್ ಕರೆಸಿಕೊಳ್ಳದಿದ್ದರೆ ರಾಜೀನಾಮೆ ನೀಡುತ್ತೇನೆ" ಎಂದು ನಿನ್ನೆಯಷ್ಟೇ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದರು.
ಅದರಂತೆ ಇಂದು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ ಅವರು, ಸ್ಪೀಕರ್ ಅನುಪಸ್ಥಿತಿಯ ಕಾರಣ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ನಾಳೆ ಸ್ಪೀಕರ್ ಭೇಟಿಗೆ ಸಮಯ ನಿಗದಿಯಾಗಿದ್ದು, ನೇರವಾಗಿ ಅವರಿಗೇ ರಾಜೀನಾಮೆ ಪತ್ರ ಹಸ್ತಾಂತರಿಸುವ ಸಾಧ್ಯತೆಯಿದೆ.




