ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವನ್ನು ಸಂಪೂರ್ಣವಾಗಿ ಶುದ್ಧೀಕರಿಸಿ, ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವವರೆಗೂ ಆಯೋಗ ನಡೆಸಲು ಉದ್ದೇಶಿಸಿರುವ KAS ಸೇರಿದಂತೆ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ತಕ್ಷಣವೇ ಮುಂದೂಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ತೀವ್ರ ಒತ್ತಾಯ ಮಾಡಿದ್ದಾರೆ.
ನವೆಂಬರ್ 15 ರಂದು ನಿಗದಿಯಾಗಿರುವ 319 ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಜೆಡಿಎಸ್ ನಾಯಕ, ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ನಡೆದ ಪರೀಕ್ಷೆ ಮತ್ತು ನೇಮಕಾತಿ ಅಕ್ರಮಗಳ ಕುರಿತು ಪ್ರಸ್ತುತ ಜಾರಿ ನಿರ್ದೇಶನಾಲಯ (ED), ಸಿಐಡಿ (CID) ಹಾಗೂ ಹೈಕೋರ್ಟ್ ನಿರ್ದೇಶನದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡ (SIT) ಸಮಗ್ರ ತನಿಖೆ ನಡೆಸುತ್ತಿವೆ ಎಂದು ನೆನಪಿಸಿದರು.
"ಆಯೋಗದ ಆರ್ಥಿಕ ವಹಿವಾಟುಗಳು ಹಾಗೂ ಭ್ರಷ್ಟಾಚಾರದ ಆರೋಪಗಳ ಮೇಲೆ ತನಿಖೆ ನಡೆಯುತ್ತಿರುವಾಗ, KPSC ಪಾರದರ್ಶಕವಾಗಿ ಪರೀಕ್ಷೆ ನಡೆಸಿ ನ್ಯಾಯ ಒದಗಿಸುತ್ತದೆ ಎಂಬ ನಂಬಿಕೆ ನನಗಿಲ್ಲ. ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲೂ ಇದೇ ಭೀತಿ ಆವರಿಸಿದೆ," ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಳವಳ ವ್ಯಕ್ತಪಡಿಸಿದರು.
KPSCಯಲ್ಲಿ ಸುಧಾರಣೆ ತರಲು ಮಾಜಿ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ರಚಿಸಲಾದ ಸಮಿತಿ ಇನ್ನೂ ತನ್ನ ವರದಿ ಸಲ್ಲಿಸಿಲ್ಲ. ಮತ್ತೊಂದೆಡೆ ಅಭ್ಯರ್ಥಿಗಳು ರಾಜಧಾನಿಯ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಗೊಂದಲದ ವಾತಾವರಣದಲ್ಲಿ ಪರೀಕ್ಷೆ ನಡೆಸುವುದು ಅರ್ಹ ಮತ್ತು ಪ್ರತಿಭಾವಂತ ಅಭ್ಯರ್ಥಿಗಳಿಗೆ ಎಸಗುವ ಅನ್ಯಾಯ. ಆಯೋಗವನ್ನು ಸಂಪೂರ್ಣ ಶುದ್ಧೀಕರಿಸಿದ ನಂತರವೇ ಪರೀಕ್ಷೆಗಳನ್ನು ನಡೆಸಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ: ರಾಮನಗರ (ದಕ್ಷಿಣ ಬೆಂಗಳೂರು) ಜಿಲ್ಲೆಯಲ್ಲಿ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಿದ ಶ್ರೇಯಸ್ಸನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.
"2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವನ್ನು ರಾಮನಗರಕ್ಕೆ ಸ್ಥಳಾಂತರಿಸುವ ನಿರ್ಧಾರ ಕೈಗೊಂಡು ಅಗತ್ಯ ಅನುದಾನ ಬಿಡುಗಡೆ ಮಾಡಿದ್ದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಕನಕಪುರ ವೈದ್ಯಕೀಯ ಕಾಲೇಜಿಗೂ ಅನುಮೋದನೆ ನೀಡಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ನಾಯಕರು ಬೇರೆಯವರ ಶ್ರಮದ ಫಲವನ್ನು ತಮ್ಮದೇ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ," ಎಂದು ಅವರು ಟೀಕಿಸಿದರು.




