ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಆರೋಪಿತ ‘ಹನಿಟ್ರ್ಯಾಪ್/ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ನಿಂದ ಉಚ್ಛಾಟಿತಗೊಂಡಿರುವ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬಂಧನದ ಭೀತಿಯಲ್ಲಿದ್ದ ಈ ಮೂವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಈ ಮುನ್ನ ಅಕ್ಟೋಬರ್ 23ರಂದು ಪ್ರಕರಣದ ಮತ್ತೊಬ್ಬ ಆರೋಪಿ, ಖಾಸಗಿ ಸುದ್ದಿವಾಹಿನಿಯ ಎಂಡಿ ರಾಕೇಶ್ ಶೆಟ್ಟಿ ಅವರಿಗೂ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರು ಕೇಳಿಬಂದು ಸಂಚಲನ ಮೂಡಿಸಿರುವ ಈ ಪ್ರಕರಣದಲ್ಲಿ, ಕೃಪಾ ಆಳ್ವಾ ಸಿಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಕಾಂಗ್ರೆಸ್ ಪಕ್ಷವು ಕೃಪಾ ಆಳ್ವಾ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ.
ಪ್ರಕರಣದ ಹಿನ್ನೆಲೆ: ಸೆಪ್ಟೆಂಬರ್ 27ರಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದ ಆಕ್ಷೇಪಾರ್ಹ ವಿಡಿಯೊ ಮೂಲಕ ತಮ್ಮ ಮಾನಹಾನಿ ಹಾಗೂ ಬ್ಲ್ಯಾಕ್ಮೇಲ್ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯನವರು ಅಕ್ಟೋಬರ್ 6ರಂದು ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ಪ್ರಸಾರ ಮಾಡದಂತೆ ಅಕ್ಟೋಬರ್ 13ರಂದು ನ್ಯಾಯಾಲಯವು 42 ಮಾಧ್ಯಮ ಸಂಸ್ಥೆಗಳು ಹಾಗೂ ಡಿಜಿಟಲ್ ವೇದಿಕೆಗಳಿಗೆ ತಡೆಆಜ್ಞೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.




