ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೆ.ಎಂ. ಸುರೇಶ್ ಅವರಿಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್‌ಅಶೋಕ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿ ಸಿದ್ದಾರೆ.
ಈ ಐತಿಹಾಸಿಕ ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ಅವರು, "ಈ ವಿಜಯವು ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟನಾ ಶಕ್ತಿ ಹಾಗೂ ಪದವೀಧರ ಮತದಾರರು ನಮ್ಮ ಮೈತ್ರಿಕೂಟದ ಮೇಲೆ ಇಟ್ಟಿರುವ ಅಚಲ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಸಾಧಿಸಿರುವ ಈ ಪ್ರಚಂಡ ವಿಜಯವು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಗೆ ಜನರು ನೀಡಿದ ಸ್ಪಷ್ಟ ಉತ್ತರವಾಗಿದೆ. ಮುಂಬರುವ ಚುನಾವಣೆಗಳಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತಷ್ಟು ಬಲಿಷ್ಠವಾಗಿ ಹೊರಹೊಮ್ಮಲಿದೆ ಎಂಬುದಕ್ಕೆ ಈ ಫಲಿತಾಂಶವೇ ಮುನ್ನುಡಿಯಾಗಿದೆ," ಎಂದು ತಿಳಿಸಿದ್ದಾರೆ.
ನೂತನ ಶಾಸಕರ ಕಾರ್ಯವೈಖರಿಯ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಆರ್‌ಅಶೋಕ್, ಪದವೀಧರರ ಆಶಯಗಳಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಾ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಹಿತದ ಕಾರ್ಯಗಳಲ್ಲಿ ಕೆ.ಎಂ. ಸುರೇಶ್ ಅವರು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಅಲ್ಲದೆ, ಈ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು, ಪದಾಧಿಕಾರಿಗಳು ಹಾಗೂ ಸಮರ್ಪಿತ ಕಾರ್ಯಕರ್ತರ ಪರಿಶ್ರಮವನ್ನು ಅವರು ಶ್ಲಾಘಿಸಿದರು. ಕಾರ್ಯಕರ್ತರ ಸಂಘಟಿತ ಶ್ರಮ ಹಾಗೂ ಮತದಾರರ ಬೆಂಬಲದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳುತ್ತಾ ಸರ್ವರಿಗೂ ತಮ್ಮ ಧನ್ಯವಾದಗಳನ್ನು ಅರ್ಪಿಸಿದರು.




