ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ 'ಸ್ಟಿಂಗ್ ಆಪರೇಷನ್' ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಸ್ತುತ ರಾಜ್ಯದಲ್ಲಿ 'ಸ್ಟಿಂಗ್ ಫ್ಯಾಕ್ಟರಿಗಳೇ' ಓಪನ್ ಆಗಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂತಹ ಕಾರ್ಯಾಚರಣೆಗಳು ಕರ್ನಾಟಕ ರಾಜಕೀಯದಲ್ಲಿ ಸಾಮಾನ್ಯ ಸಂಗತಿಯಾಗಿಬಿಟ್ಟಿದ್ದು, ರಾಜಕಾರಣಿಗಳು ತಲೆತಗ್ಗಿಸುವಂತೆ ಮಾಡಿವೆ ಮತ್ತು ಇದು ಇಡೀ ರಾಜ್ಯದ ಜನರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, "ಪ್ರತಿಯೊಬ್ಬರೂ ತಮ್ಮದೇ ಆದ ಸ್ಟಿಂಗ್ ಆಪರೇಷನ್ ಫ್ಯಾಕ್ಟರಿಯನ್ನು ಹೊಂದಿರುವಂತಿದೆ. ಇದನ್ನು ನೋಡಲು ಮತ್ತು ಕೇಳಲು ಅಸಹ್ಯವಾಗುತ್ತಿದೆ" ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಇನ್ನೂ ಅನೇಕ ಗಂಭೀರ ಹಾಗೂ ತುರ್ತು ಸಮಸ್ಯೆಗಳಿರುವಾಗ ಈ ವಿಷಯವೇ ಸಾರ್ವಜನಿಕ ಚರ್ಚೆಯ ಪ್ರಮುಖ ವಸ್ತುವಾಗಿರುವುದು ಸರಿಯಲ್ಲ ಎಂದ ಅವರು, ಇಂತಹ ಅಸಹ್ಯಕರ ಚಟುವಟಿಕೆಗಳಿಗೆ ಅಂತ್ಯ ಹಾಡಲು ಸರ್ಕಾರ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ನ್ಯಾಯಾಂಗ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಲು ನಿರಾಕರಿಸಿದ ರಾಜಣ್ಣ, ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರ ಗಟ್ಟಿಯಾಗಿ ಧ್ವನಿ ಎತ್ತಿದ ಕೆ.ಎನ್. ರಾಜಣ್ಣ, ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ತಮಗೆ ಯಾರ ನೈತಿಕ ಬೆಂಬಲದ ಅಗತ್ಯವೂ ಇಲ್ಲ ಎಂದು ಅವರು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು. "ಒಬ್ಬ ವ್ಯಕ್ತಿ ತಪ್ಪು ಮಾಡಿದಾಗ ಮಾತ್ರ ಇತರರ ಬೆಂಬಲವನ್ನು ನಿರೀಕ್ಷಿಸುತ್ತಾನೆ. ಆದರೆ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡದಿರುವುದರಿಂದ ಯಾರ ಬೆಂಬಲವೂ ಅವರಿಗೆ ಬೇಕಾಗಿಲ್ಲ" ಎಂದು ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದಾಗ ಅವರು ಶ್ರವಣಬೆಳಗೊಳಕ್ಕೆ ತೆರಳಿದ್ದರಿಂದ ಭೇಟಿ ಸಾಧ್ಯವಾಗಲಿಲ್ಲ ಎಂದು ತಿಳಿಸಿದ ರಾಜಣ್ಣ, ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿಯವರನ್ನು ನೇರವಾಗಿ ಭೇಟಿಯಾಗುವುದಾಗಿ ತಿಳಿಸಿದರು.




