ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಿನ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಪಕ್ಷವು ಮೊದಲ ಆದ್ಯತೆ ನೀಡಿದ್ದು, 'ವಿಕಸಿತ ಭಾರತ' ನಿರ್ಮಾಣದ ಮಹತ್ಕಾರ್ಯದಲ್ಲಿ ಮಹಿಳೆಯರು ಪ್ರಮುಖ ಚಾಲಕ ಶಕ್ತಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.
ನಗರದ ಪಕ್ಷದ ರಾಜ್ಯ ಕಚೇರಿ 'ಜಗನ್ನಾಥ ಭವನ'ದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಘಟಕದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನೂತನ ಪದಾಧಿಕಾರಿಗಳಿಗೆ ಸನ್ಮಾನ: ಸಭೆಯ ವೇಳೆ ಪಕ್ಷದ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಬಂಜಾರ ಸಮುದಾಯದ ಆರಾಧ್ಯ ದೈವ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಾನ ಮಹಾಮಠದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ನಾಯಕ, ಶಾಸಕ ಪ್ರಭು ಚವ್ಹಾಣ್ ಅವರನ್ನು ಪಕ್ಷದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕು. ಸಿ. ಮಂಜುಳಾ, ಕರ್ನಾಟಕ ಬಾಲಭವನದ ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪ್ರಕಾಶ್ ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.




