ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕುರಿತ ಅಂತಿಮ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದ್ದು, ಬಹುತೇಕ ಮುಂದಿನ ಜನವರಿ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ 6,342 ಗ್ರಾಮ ಗ್ರಂಥಾಲಯಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ನಿನ್ನೆಯೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತ ಸಂಪೂರ್ಣ ವಿವರಗಳು ರಾಜ್ಯಪತ್ರದ ವೆಬ್‌ಸೈಟ್‌ನಲ್ಲಿ (https://erajyapatra.karnataka.gov.in/) ಲಭ್ಯವಿವೆ ಎಂದು ಮಾಹಿತಿ ನೀಡಿದರು.
ಚುನಾವಣೆ ವಿಳಂಬಕ್ಕೆ ಕಾರಣವೇನು?: 2022ರಲ್ಲೇ ಸ್ಥಳೀಯ ಸಂಸ್ಥೆಗಳ ಅವಧಿ ಪೂರ್ಣಗೊಂಡಿದ್ದರೂ ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲಾಯಿತು.
ಜೊತೆಗೆ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳು ನಗರಸಭೆ, ನಗರಪಾಲಿಕೆ ಹಾಗೂ ಮಹಾನಗರ ಪಾಲಿಕೆಗಳಿಗೆ ಸೇರ್ಪಡೆಯಾದವು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾದ ಕಾರಣ ಚುನಾವಣೆ ಕೊಂಚ ವಿಳಂಬವಾಯಿತು.
ಇದೀಗ ಸರ್ಕಾರ ತನ್ನ ಜವಾಬ್ದಾರಿಯನ್ನು ಪೂರ್ಣಗೊಳಿಸಿದ್ದು, ರಾಜ್ಯ ಚುನಾವಣಾ ಆಯೋಗವು ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಿಸಲಿದೆ. ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸನ್ನದ್ಧವಾಗಿದೆ ಎಂದು ಖಂಡ್ರೆ ಸ್ಪಷ್ಟಪಡಿಸಿದರು.
ಮಾನವ-ಆನೆ ಸಂಘರ್ಷ ತಡೆಗೆ 'ಆನೆಧಾಮ' ಪರಿಹಾರ: ಇದೇ ವೇಳೆ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಮಾನವ ಮತ್ತು ಆನೆ ಸಂಘರ್ಷದ ಕುರಿತು ಪ್ರತಿಕ್ರಿಯಿಸಿದ ಸಚಿವರು, 'ಆನೆಧಾಮ' (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಸ್ಥಾಪನೆಯೇ ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಬಲ್ಲದು ಎಂದು ಅಭಿಪ್ರಾಯಪಟ್ಟರು.
ತಾವು ಈ ಹಿಂದೆ ಅರಣ್ಯ ಸಚಿವರಾಗಿದ್ದಾಗಲೇ ಈ ಯೋಜನೆಯ ನೀಲನಕ್ಷೆ ರೂಪಿಸಿದ್ದೆ. ಆದರೆ, ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಯೋಜನೆಯನ್ನು ತಿರಸ್ಕರಿಸಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಕಾಫಿ ಮತ್ತು ಇತರ ತೋಟಗಳಲ್ಲೇ ಹುಟ್ಟಿ ಬೆಳೆಯುವ ಆನೆಗಳಿಂದ ಉಪಟಳ ಹೆಚ್ಚಾಗುತ್ತಿದೆ. ಅಂತಹ ಆನೆಗಳನ್ನು ಸೆರೆಹಿಡಿದು ಆನೆಧಾಮದಲ್ಲಿ ಬಿಡುವುದರಿಂದ ಸಂಘರ್ಷವನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಹಿರಿಯ ಹಾಗೂ ಅನುಭವಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಈಗಾಗಲೇ ಸಭೆ ನಡೆಸುವುದಾಗಿ ತಿಳಿಸಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.




