ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಮೇರುನಟರಾದ ಡಾ. ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡುತ್ತಿತ್ತು.
ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.