ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗ ಕುಟುಂಬಗಳಿಗೆ 10 ಲಕ್ಷ ಪರಿಹಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗ ಕುಟುಂಬಗಳಿಗೆ ತಲಾ
10 ಲಕ್ಷ ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಉತ್ತಮ ಶಿಕ್ಷಣ ಪಡೆದಿದ್ದ ಭರತ್ ಭೂಷಣ್ ಅವರು ಚಿಕ್ಕ ವಯಸ್ಸು, ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯ ಎಂದು ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದರು.

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಭಯೋತ್ಪಾದಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅಮಾಯಕ ಜನರನ್ನು ಹಾಡಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹೇಯಕೃತ್ಯ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆಯೂ ಕಾಶ್ಮೀರದ ಪುಲ್ವಾಮಾ, ಬಾಲಾಕೋಟ್‌ನಲ್ಲಿ ಈ ರೀತಿಯ ಘಟನೆ ನಡೆದಿತ್ತು. ಈಗ ಪುನ: ಅಂತಹ ಘಟನೆ ಮರುಕಳಿಸಿದೆ. ಇಂಥಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದು ಅವರು ಸಂಶಯ ವ್ಯಕ್ತಪಡಿಸಿದರು.

ಕನ್ನಡಿಗರಾದ ಭರತ್ ಭೂಷಣ್, ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದ ಆಂದ್ರಪ್ರದೇಶದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧು ಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕಾಶ್ಮೀರದಲ್ಲಿ ಸಿಲುಕಿರುವ 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

 ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಅದರಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು.

 

Share This Article
error: Content is protected !!
";