ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಹೆಚ್ಚಿನ ವಿಚಾರಣೆಗಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಅನ್ವಯ ಮೂರು ದಿನಗಳ ಕಾಲ ರನ್ಯಾ ರಾವ್ ಅವರನ್ನು ಕಸ್ಟಡಿಗೆ ನೀಡಿ ಮಾರ್ಚ್ 7ರಂದು ನ್ಯಾಯಾಲಯ ಆದೇಶಿಸಿತ್ತು. ಇದೀಗ, ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ನಟಿ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 3ರಂದು ಎಮಿರೇಟ್ಸ್ ಏರ್‌ಲೈನ್ಸ್ ಮೂಲಕ ದುಬೈನಿಂದ ಬೆಂಗಳೂರಿಗೆ ಬಂದಿಳಿದ ರನ್ಯಾ ರಾವ್ ಅವರನ್ನು 14.8 ಕೆ.ಜಿ ಚಿನ್ನದ ಸಮೇತ ಡಿಆರ್‌ಐ ಅಧಿಕಾರಿಗಳು ಬಂಧನ ಮಾಡಿದ್ದರು.

