ಗೌರಿ-ಗಣೇಶ ಹಬ್ಬಕ್ಕೆ 1500 ಹೆಚ್ಚುವರಿ ಬಸ್ ಸೌಲಭ್ಯ, ಶೇ.5 ರಿಂದ 10ರಷ್ಟು ರಿಯಾಯಿತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆಪ್ಟೆಂಬರ್ 06 ರ ಸ್ವರ್ಣಗೌರಿ ವ್ರತ, ಸೆಪ್ಟೆಂಬರ್ 07 ಗಣೇಶಚತುರ್ಥಿ ಹಾಗೂ ಸೆಪ್ಟೆಂಬರ್ 08ರ ವಾರಾಂತ್ಯ ದಿನ ಭಾನುವಾರವಾದ್ದರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 05 ರಿಂದ ಸೆಪ್ಟೆಂಬರ್ 07ರ ವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್ 08 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಿರುವುದು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.  ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ತಿಳಿಸಿದೆ.

ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕ.ರಾ.ರ.ಸಾ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";