ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದಾವಣಗೆರೆ–ಚಿತ್ರದುರ್ಗ–ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 1211 ಎಕರೆ ಭೂ ಸ್ವಾಧೀನಕ್ಕೆ ರೈಲ್ವೆ ಇಲಾಖೆಯಿಂದ ಕೋರಲಾಗಿತ್ತು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ತುಮಕೂರು–ಚಿತ್ರದುರ್ಗ–ದಾವಣಗೆರೆ ಹಾಗೂ ರಾಯದುರ್ಗ–ಪಾವಗಡ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಅವರು ಮಾತನಾಡಿದರು.
ಇದುವರೆಗೆ 1026 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಭರಮಸಾಗರ–ಚಿತ್ರದುರ್ಗ, ಚಿತ್ರದುರ್ಗ–ಹಿರಿಯೂರು ಹಾಗೂ ಹಿರಿಯೂರು–ತಾವರಕೆರೆ ನಡುವೆ ಮೂರು ಹಂತದಲ್ಲಿ ಭೂಸ್ವಾಧೀನ ನಡೆಸಲಾಗುತ್ತಿದೆ.
ಒಟ್ಟು 156 ಎಕರೆ ಭೂಸ್ವಾಧೀನದ ಅಂತಿಮ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಹಂತಗಳಲ್ಲಿ ಈಗಾಗಲೇ ರೈಲ್ವೆ ಇಲಾಖೆಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಮಾಹಿತಿ ನೀಡಿದರು.