![](https://www.chandravallinews.com/wp-content/uploads/2022/11/WhatsApp-Image-2022-11-05-at-8.40.20-PM-1024x717.jpeg)
i
ನ. 06 ರಂದು ಟಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನ. 06 ರಂದು ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷೆಯನ್ನು ಸುವ್ಯವಸ್ಥೆಯಿಂದ ನಡೆಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಶಿಕ್ಷಕರ ಅರ್ಹತಾ ಪರೀಕ್ಷೆ ನ. 06 ರಂದು ಬೆಳಿಗ್ಗೆ ಹಾಗೂ ಮಧ್ಯಾಹ್ನ 02 ಅಧಿವೇಶನದಲ್ಲಿ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ನಿಟ್ಟಿನಲ್ಲಿ ನಗರದಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್, ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷೆಗೆ ಅಧಿಕಾರಿಗಳು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಸಮಗ್ರ ತಪಾಸಣೆ ನಡೆಸಲು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಪರೀಕ್ಷೆಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅವಕಾಶ ಇರುವುದಿಲ್ಲ. ಈ ಬಗ್ಗೆ ಪರೀಕ್ಷಾರ್ಥಿಗಳ ತಪಾಸಣೆ ಸೂಕ್ತ ರೀತಿಯಲ್ಲಿ ಆಗಬೇಕು ಎಂದು ತಾಕೀತು ಮಾಡಿದರು. ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಸೂಕ್ತ ತರಬೇತಿ ನೀಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಮೂಲಭೂತ ಸೌಕರ್ಯ, ಸಿಸಿ ಟಿ.ವಿ. ವ್ಯವಸ್ಥೆ, ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಸೂಕ್ತ ಆಸನ ಹಾಗೂ ಬೆಳಕಿನ ವ್ಯವಸ್ಥೆ ಸಮರ್ಪಕವಾಗಿ ಇರುವ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು. ಅಲ್ಲದೆ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಸಲು ಅವಕಾಶ ಒದಗಿಸದಂತೆ, ಮತ್ತು ಪರೀಕ್ಷೆಯನ್ನು ಸುವ್ಯವಸ್ಥೆಯಿಂದ ಗೊಂದಲಗಳಿಗೆ ಅವಕಾಶವಿಲ್ಲದಂತೆ, ಸುಗಮವಾಗಿ ನಡೆಸಲು ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಡಿಡಿಪಿಐ ರವಿಶಂಕರ್ ರೆಡ್ಡಿ, ಶಿಕ್ಷಣ ಅಧಿಕಾರಿ ಹಾಗೂ ಟಿಇಟಿ ಪರೀಕ್ಷೆಯ ನೋಡಲ್ ಅಧಿಕಾರಿ ತಿಪ್ಪೇಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಅಗತ್ಯ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದರು.