![](https://www.chandravallinews.com/wp-content/uploads/2024/06/WhatsApp-Image-2024-06-29-at-4.55.11-AM-2-1024x690.jpeg)
i
ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಸಿಐಡಿ ಪೊಲೀಸರು ಗುರುವಾರ ನ್ಯಾಯಾಲಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಪ್ರಕರಣ ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.
ಯಡಿಯೂರಪ್ಪ ವಿರುದ್ಧ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ಅವರು ತಿಳಿಸಿದ್ದಾರೆ.
ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೊ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಚಾರ್ಜ್ಶೀಟ್ ನಲ್ಲಿ ಏನಿದೆ?
ಯಡಿಯೂರಪ್ಪ ಅವರು ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಮತ್ತು ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ನಂತರ ಬಾಲಕಿಯ ತಾಯಿ ಇದನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಪೋಸ್ಟ್ ಆಗಿದ್ದ ವಿಡಿಯೋ ಡಿಲೀಟ್ ಮಾಡಿಸಲು ಮೂವರು ಪ್ರಯತ್ನಿಸಿದ್ದಾರೆ. ವೈ.ಎಂ. ಅರುಣ್, ಎಂ.ರುದ್ರೇಶ್, ಜಿ.ಮರಿಸ್ವಾಮಿ ಎನ್ನುವರು ಮಹಿಳೆಯನ್ನು ಕರೆತಂದು ವಿಡಿಯೋ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಮೂವರ ವಿರುದ್ದವೂ ಪೊಲೀಸರು ಇಂದು ಆರೋಪಪಟ್ಟಿ ದಾಖಲಿಸಿದ್ದಾರೆ. 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಕಳೆದ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.