ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಶೃಂಗೇರಿ ತಾಲೂಕು ಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶುಕ್ರವಾರ ಆನೆ ದಾಳಿಯಿಂದ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಈ ಭಾಗದ ಅಪಾಯಕಾರಿ ಸ್ಥಳದಲ್ಲಿರುವ 17 ಕುಟುಂಬಗಳಿಗೆ ತ್ವರಿತವಾಗಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಸಾರ್ ಬಳಿ ಆನೆ ದಾಳಿಗೆ ಮೃತಪಟ್ಟ ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಸಚಿವರು, ಆನೆ ದಾಳಿಗೆ ಸಂಬಂಧಿಸಿದಂತೆ ಕೆರೆ ಗ್ರಾಮ ಪಂಚಾಯ್ತಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ 17 ಮನೆಗಳು ಅಪಾಯಕಾರಿ ಪ್ರದೇಶಗಳಲ್ಲಿದ್ದು, ಅವುಗಳನ್ನು ತ್ವರಿತವಾಗಿ ಸ್ಥಳಾತರಿಸುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.
“ಆನೆ ದಾಳಿ ನಡೆಯುವ ಪ್ರದೇಶಗಳಲ್ಲಿರುವ ಕುಟುಂಬಗಳ ಸ್ಥಳಾಂತರ ಪ್ಯಾಕೇಜ್ ಗೆ 300 ಕೋಟಿ ರೂ. ಅಗತ್ಯವಿದೆ. ಈ ಕುರಿತು ಈಗಾಗಲೇ ಅರಣ್ಯ ಸಚಿವರೊಂದಿಗೆ ಮಾತನಾಡಿದ್ದು, ಹಣ ಬಿಡುಗಡೆಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಅಪಾಯಕಾರಿ ಪ್ರದೇಶದಲ್ಲಿರುವ 17 ಕುಟುಂಬಗಳಿಗೆ ತಕ್ಷಣವೇ ಪುನರ್ವಸತಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ ತ್ವರಿತವಾಗಿ ಕ್ರಮ ವಹಿಸಲಾಗುವುದು,” ಎಂದು ತಿಳಿಸಿದರು.
“ಆನೆದಾಳಿಗೆ ಒಳಗಾದವರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಈಗಾಗಲೇ ಕ್ರಮ ವಹಿಸಲಾಗುತ್ತಿದೆ. ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಅರಣ್ಯಾಧಿಕಾರಿಗಳ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಆನೆ ದಾಳಿಗೆ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೀಡುವ ಬೇಡಿಕೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ, ಕ್ರೆಡಲ್‌ಅಧ್ಯಕ್ಷ ಡಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

