ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನದ ಉದ್ಯಮಿ ಒಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಹಾಗೂ ಕರ್ತವ್ಯ ಲೋಪ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಿತ ಐವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಮಾಡಿದ್ದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ಕೋರಮಂಗಲ ಠಾಣೆಯ ಇನ್ಸ್‌ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಗಿದೆ.
ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂ. ವಸೂಲಿಗೆ ಯತ್ನಿಸಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲಸೂರು ಗೇಟ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ, ಓರ್ವ ಎಎಸ್ಐ ಸೇರಿದಂತೆ ಮೂವರು ಸಿಬ್ಬಂದಿಯನ್ನು ಆಯುಕ್ತರು ಅಮಾನತುಗೊಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಡಿ ಕೋರಮಂಗಲ ಠಾಣೆಯ ಇನ್ಸ್‌ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಕೈಗೊಂಡಾಗ ಅವಧಿ ಅಂತ್ಯವಾದ ನಂತರವೂ ಪಬ್, ಬಾರ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಕಂಡು ಬಂದಿತ್ತು.
ಆಗ್ನೇಯ ವಿಭಾಗ ಹಾಗೂ ಕೇಂದ್ರ ವಿಭಾಗದ ಡಿಸಿಪಿಯವರ ಪ್ರಾಥಮಿಕ ತನಿಖಾ ವರದಿ ಆಧರಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ರಾತ್ರಿ ಗಸ್ತು ನಡೆಸಿದ ಆಯುಕ್ತರು:
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಸೆ.21 ರಂದು ರಾತ್ರಿ ಬೆಂಗಳೂರಿನಾದ್ಯಂತ ದಿಢೀರ್ ವಿಶೇಷ ರಾತ್ರಿ ಗಸ್ತು ಕಾರ್ಯಾಚರಣೆ ಕೈಗೊಂಡಿದ್ದರು.
ವಾರಾಂತ್ಯದಲ್ಲಿ ನಡೆದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ಎಲ್ಲಾ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಎಸಿಪಿಗಳು, ಪಿಐಗಳು ಹಾಗೂ ಪಿಎಸ್‌ಐಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.
ಇದೇ ಸಂದರ್ಭದಲ್ಲಿ ಪೊಲೀಸ್ ಆಯುಕ್ತರು ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಮೆಜೆಸ್ಟಿಕ್‌ನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಇತರ ನಾಕಾಬಂದಿ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂದರ್ಭದಲ್ಲಿ ಲೋಪಗಳು ಕಂಡು ಬಂದಿದ್ದವು.
ಸಬ್ ಇನ್ಸ್‌ಪೆಕ್ಟರ್‌ಗಳಿಂದ ಹಿಡಿದು ಹಿರಿಯ ಅಧಿಕಾರಿಗಳವರೆಗೂ ಎಲ್ಲಾ ಸಿಬ್ಬಂದಿಗಳೂ ರಾತ್ರಿ ಗಸ್ತು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದರು.

