ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 7,02,731 ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿ ನೀಡಿರುವ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರಿಗೆ ಹಾಗೂ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಹಿಂದೆ ನೀಡಲಾಗಿದ್ದ 2,26,175 ಮನೆಗಳ ನಿರ್ಮಾಣದ ಗುರಿಯ ಜೊತೆಗೆ ಹೆಚ್ಚುವರಿ 4,76,556 ಮನೆಗಳನ್ನು ನಿರ್ಮಿಸುವ ಉದ್ದೇಶವನ್ನು ಸಾಧಿಸಲು ಸರ್ವರಿಗೂ ಸೂರು ಕಲ್ಪಿಸುವ ಮಹತ್ವದ ಗುರಿ ತಲುಪುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ನಿರ್ಧಾರದಿಂದ ಗ್ರಾಮೀಣ ಕುಟುಂಬಗಳಿಗೆ ಅಗತ್ಯ ಸೌಕರ್ಯಗಳೊಂದಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಂಡು ನಾಡಿನ ಬಡವರ ಸ್ವಂತ ಸೂರು ಹೊಂದುವ ಕನಸುಗಳನ್ನು ಈಡೇರಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸುವಲ್ಲಿ ಶ್ರಮಿಸಲಿ. ಸದರಿ ಯೋಜನೆಯು ನಾಡಿನ 7 ಲಕ್ಷ ಬಡ ಕುಟುಂಬಗಳಿಗೆ ಸದುಪಯೋಗವಾಗಲಿದ್ದು ಸುಸಜ್ಜಿತ ಮನೆ ಹಾಗೂ ಮೂಲಸೌಕರ್ಯಗಳೊಂದಿಗೆ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.

