ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಈಗ ಮಹಾರಾಷ್ಟ್ರದ ಪ್ರತಿಷ್ಠಿತ ಬಿಎಂಸಿ ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಜಯಭೇರಿ ಬಾರಿಸಿದ್ದು ಇದು ಜನತೆ ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಐತಿಹಾಸಿಕ ವಿಜಯದ ರೂವಾರಿಗಳಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ್ತು ಮಹಾರಾಷ್ಟ್ರದ ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು ಅಶೋಕ್ ತಿಳಿಸಿದ್ದಾರೆ.
ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಸಹ ಬೆಂಗಳೂರಿನ ಮಹಾ ಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್‌ಪಕ್ಷದ ಪತನದ ಹಾದಿ ಆರಂಭವಾಗುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

