ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾವಿರ ಹಾಸಿಗೆಗಳ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು 5 ವರ್ಷಗಳಲ್ಲಿ 4,000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಸಾವಿರ ಹಾಸಿಗೆಗಳ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ನಡುವಿನ ಒಡಂಬಡಿಕೆಗೆ ಸಹಿ ಹಾಕಿದ ಬಳಿಕ ಸಿಎಂ ಅವರು ಮಾತನಾಡಿದರು.
ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಹಾಸಿಗೆಗಳ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ. ಗಳ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ.
ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದು ಸಿಎಂ ಶ್ಲಾಘೀಸಿದರು.
ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ
ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ. ನೀಡುವ ಮೂಲಕ ಸರ್ಕಾರದೊಂದಿಗೆ ಕೈಜೋಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಿಎಂ ತಿಳಿಸಿದರು.

