ಮನರೇಗಾ ಉಳಿಸುವ ಸಲುವಾಗಿ ಲೋಕಭವನ ಚಲೋ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ಲೋಕಭವನ ಚಲೋ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
, ಪ್ರತಿ ತಾಲೂಕುಗಳಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಅಲ್ಲದೆ ಪ್ರತಿ ಪಂಚಾಯತ್​ ಮಟ್ಟದಲ್ಲಿ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋನಿಯಾ ಗಾಂಧಿ ನಾಯಕತ್ವದಲ್ಲಿ 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲ ಆಶ್ಚರ್ಯವನ್ನುಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ, ಈ ಹಕ್ಕು ಈಗ ಮೊಟಕಾಗಿದೆ. ಆದ ಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.

- Advertisement - 

ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು. ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ, ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆ ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ. ಈ ಯೋಜನೆಗೆ ಅನುದಾನ ಒಗಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.

- Advertisement - 

ಜನರಿಗಾಗಿ ನಮ್ಮ ಸೇವೆ, ಕುಟುಂಬಕ್ಕಾಗಿ ಅಲ್ಲ:
ತಂದೆಗಾಗಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಕೇಳಿದಾಗ
, ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿ ಅಲ್ಲ. ಕುಟುಂಬದ ಆಸೆ, ಭಾವನೆಗಳು, ತೊಂದರೆಯಲ್ಲಿ ಇರುವುದರ ಬಗ್ಗೆ ಅವರು ಮಾತನಾಡಿಕೊಳ್ಳಲಿ. ನಾವು ಈ ದೇಶದ ಜನತೆಯ ಹಿತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು‌.

ಮಾಜಿ ಸಚಿವ, ಹಾಲಿ ಶಾಸಕ ರೇವಣ್ಣ ಅವರನ್ನ ಮನೆಗೆ ನುಗ್ಗಿ ಬಂಧಿಸಲಾಯಿತು ಎನ್ನುವ ದೇವೆಗೌಡರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ದೇಶದಲ್ಲಿ ಏನೇನು ಕಾನೂನು ಇದೆಯೋ ಅದೆಲ್ಲವೂ ಎಲ್ಲರಿಗೂ ಒಂದೇ. ಯಾರಿಗೆ ಏನೇನು ಕಾನೂನು ಮಾಡಬೇಕು ಅನ್ನೋದಕ್ಕೆ ನೀವೇ ಉತ್ತರ ನೀಡಬೇಕು ಎಂದು ಡಿಸಿಎಂ ಶಿವಕುಮಾರ್ ಪ್ರತಿಕ್ರಿಯಿಸಿದರು.

ಸದನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ರಾಷ್ಟ್ರಪತಿಯವರಿಗೆ ಪತ್ರ ಬರೆದಿರುವ ಬಗ್ಗೆ ಪ್ರಶ್ನಿಸಿದಾಗ, ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ರಾಜ್ಯಪಾಲರು ಭಾಷಣ ಓದಿ, ರಾಷ್ಟ್ರಗೀತೆ ಆಗುವ ತನಕ ಇರಬಹುದಿತ್ತು. ರಾಜ್ಯಪಾಲರಿಗೆ ನರೇಗಾ ಬಗೆಗಿನ ಭಾಷಣ ಓದುವುದಕ್ಕೆ ಇಷ್ಟವಿಲ್ಲದಿದ್ದರೆ ಹಾಗೆಯೇ ಇರಬಹುದಿತ್ತು. ಜೊತೆಗೆ ಸಾಕಷ್ಟು ಬೇರೆ ಅವಕಾಶಗಳೂ ಇದ್ದವು. ರಾಜ್ಯಪಾಲರು ಸರ್ಕಾರ ನೀಡಿದ ಭಾಷಣ ಓದುವುದು ಸಂವಿಧಾನ ರಕ್ಷಣೆಯ ಕರ್ತವ್ಯ. ನಮ್ಮಲ್ಲಿ ಅಲ್ಲದೇ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿದೆ ಎಂದು ಶಿವಕುಮಾರ್ ತಿಳಿಸಿದರು.

 

 

Share This Article
error: Content is protected !!
";