ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಲಸಾಗರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ತೆರಳಿದ್ದ ಕುರಿಗಾಹಿ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಾರಣಾಂತಿಕ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಹಲಸಾಗರ ಗ್ರಾಮದ ಓಬಣ್ಣ (30) ಮೃತ ಕುರಿಗಾಹಿಯಾಗಿದ್ದು, ಅವರು ಪ್ರತಿದಿನದಂತೆ ಕುರಿ ಮೇಯಿಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಆದರೆ ಸಂಜೆಯಾದರೂ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ಆರಂಭಿಸಿದರು.
ಈ ವೇಳೆ ಅರಣ್ಯ ಪ್ರದೇಶದೊಳಗೆ ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಓಬಣ್ಣ ಮೃತದೇಹ ಪತ್ತೆಯಾಯಿತು.
ಘಟನೆ ತಿಳಿದು ಗ್ರಾಮಸ್ಥರು ಆಕ್ರೋಶಗೊಂಡು, ಕುರಿಗಾಹಿಯನ್ನು ಸಾಯಿಸಿದ ಕರಡಿಯನ್ನು ಹುಡುಕಿ ಹೊಡೆದು ಸಾಯಿಸಿದರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಗುಡೇಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅರಣ್ಯ ಪ್ರದೇಶದ ಸುತ್ತಮುತ್ತ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭದ್ರತಾ ಕ್ರಮಗಳನ್ನು ಬಲಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

