ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದಲ್ಲಿ ಹಂತ ಹಂತವಾಗಿ ತೋಟಗಾರಿಕಾ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತಿಪಟೂರು ಶಾಸಕ ಷಡಕ್ಷರಿ ಇವರು ತುಮಕೂರು ಜಿಲ್ಲೆ ತಿಪಟೂರಿನಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಅವಶ್ಯಕತೆ ಇದೆ. ಇದಕ್ಕಾಗಿ ಸರ್ಕಾರ ಸರ್ಕಾರ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಕ್ರಮ ವಹಿಸಬೇಕೆಂದು ಕೋರಿದರು.
ಹೊಸ ತೋಟಗಾರಿಕೆ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಇರುವ ಸಾಧಕ-ಬಾಧಕಗಳನ್ನು ಪರಿಶೀಲಿಸಲು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವಿಶ್ರಾಂತ ಕುಲಪತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.
ತಿಪಟೂರು ತಾಲ್ಲೂಕಿನ ಬಿದರೆಗುಡಿಕಾವಲಿನಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪಿಸುವುದು ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ತೋಟಗಾರಿಕೆ ಮಹಾವಿದ್ಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಈ ಸಮಿತಿ ವಿವಿಧ ಆಯಾಮಗಳನ್ನು ಪರಿಶೀಲಿಸಿ ವರದಿ ನೀಡಿದೆ. ಸದರಿ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ತೋಟಗಾರಿಕೆ ಕಾಲೇಜುಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪ್ರಸ್ತುತ ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ಅಲಮೇಲದಲ್ಲಿ ಹೊಸ ತೋಟಗಾರಿಕೆ ಕಾಲೇಜು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳದಲ್ಲಿ ಹೊಸದಾಗಿ ತೋಟಗಾರಿಕೆ ಕಾಲೇಜು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತಿಪಟೂರಿನಲ್ಲಿ ತೋಟಗಾರಿಕೆ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

