ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರ ಉಪಸ್ಥಿತಿಯಲ್ಲಿ ರಾಜ್ಯ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷಿ ಗೋಯಲ್ ಅವರೊಂದಿಗೆ ರಾಜ್ಯದಲ್ಲಿ ತಂಬಾಕು ಬೆಳೆಯುವ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೆ ಅತ್ಯಂತ ಫಲಪ್ರದ ಮಾತುಕತೆ ನಡೆಸಲಾಯಿತು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಈ ಕೂಡಲೇ ತಂಬಾಕು ಖರೀದಿ ಮಾಡುವುದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರರ ಹಲವಾರು ಪ್ರಮುಖ ಮನವಿಗಳಿಗೆ ಗೋಯಲ್ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು.
ಅಲ್ಲದೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾನ್ಯರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಧಾವಿಸಿ ಬರುವಂತೆ ಸೂಚಿಸಿದರು.
ಮಾಜಿ ಮಂತ್ರಿ ಸಾ.ರಾ. ಮಹೇಶ್, ಮೈಸೂರು – ಕೊಡಗು ಸಂಸದ ಯದುವೀರ್ ಒಡೆಯರ್, ಶಾಸಕ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್. ಮಂಜೇಗೌಡ, ಕೋಲಾರ ಸಂಸದ ಮಲ್ಲೇಶ್ ಬಾಬು, ಮಾಜಿ ಶಾಸಕ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಕೃಷ್ಣನಾಯಕ ಅವರು ಈ ಸಂದರ್ಭದಲ್ಲಿ ಚರ್ಚೆಯಲ್ಲಿ ಭಾಗಿಯಾಗಿದ್ದರು.

