ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅಂಗೀಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತಿತರರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಬಿ ರಿಪೋರ್ಟ್ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ಲೊಕಾಯುಕ್ತ ಪೊಲೀಸರು, ಜಾರಿ ನಿರ್ದೆಶನಾಲಯ(ಇ.ಡಿ), ಜಮೀನಿನ ಮೂಲ ಮಾಲೀಕ ದೇವರಾಜು, ಮುಖ್ಯಮಂತ್ರಿ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ, ಮುಡಾದ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿದೆ.
ಏನಿದು ಪ್ರಕರಣ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ. ಸದರಿ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡು ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಹೀಗಾಗಿ, ಪ್ರಕರಣದ ಕುರಿತು ಎಫ್ಐಆರ್ದಾಖಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ನಂತರ ಪ್ರಕರಣದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ, 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದನ್ನು ಸ್ಮರಿಸಬಹುದಾಗಿದೆ.
ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಆಗಸ್ಟ್17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್19ರಂದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪೊಲೀಸ್ತನಿಖೆಗೆ ಅನುಮತಿಸಿ 2024ರ ಸೆಪ್ಟೆಂಬರ್24ರಂದು ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಬಿ ರಿಪೋರ್ಟ್ಸಲ್ಲಿಸಿದ್ದರು. ಅದನ್ನು ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು.
ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿರುವ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಪೊಲೀಸ್ವರಿಷ್ಠಾಧಿಕಾರಿ ಸಲ್ಲಿಸಿರುವ ಬಿ ರಿಪೋರ್ಟ್ಪರಿಶೀಲಿಸಬೇಕು. ಬಿ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೇ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸ್ನೇಹಮಹಿ ಕೃಷ್ಣ ಕೋರಿದ್ದಾರೆ.

