ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಾಲ್ಲೂಕಿನ ಎಸ್.ಆರ್ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಜಾತ್ಯತೀತ ಜನತಾದಳದ (ಜೆಡಿಎಸ್) ವತಿಯಿಂದ ಹಮ್ಮಿಕೊಳ್ಳಲಾಗಿದ್ದ BLA-2 (Booth Level Agents) ಕಾರ್ಯಾಗಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಮಹತ್ವದ ಮಾರ್ಗದರ್ಶನ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ-
ಚುನಾವಣಾ ಆಯೋಗವು ಪ್ರಸ್ತುತ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಮಾಹಿತಿ ನೀಡಿದರು. “ಪ್ರಜಾಪ್ರಭುತ್ವದ ಅಡಿಪಾಯವೇ ಮತದಾನ, ಹೀಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ ಹಾಗೂ ತಪ್ಪುಗಳ ತಿದ್ದುಪಡಿಯತ್ತ ಗಮನಹರಿಸಬೇಕು” ಎಂದು ಅವರು ಕರೆ ನೀಡಿದರು.
BLA-2 ಜವಾಬ್ದಾರಿಗಳ ಬಗ್ಗೆ ಚರ್ಚೆ-
ಬೂತ್ ಮಟ್ಟದ ಏಜೆಂಟ್ (BLA-2) ಗಳ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಚುನಾವಣಾ ಸಮಯದಲ್ಲಿ ಮತ್ತು ಅದಕ್ಕೂ ಮೊದಲು ಅವರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಯಿತು.
”ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಶಿಸ್ತಿನಿಂದ ಸಂಘಟಿತರಾಗಿ ಪಕ್ಷವನ್ನು ಬಲಪಡಿಸಬೇಕು,” ಎಂದು ಇದೇ ಸಂದರ್ಭದಲ್ಲಿ ಮುಖಂಡರು ಕಿವಿಮಾತು ಹೇಳಿದರು. ಈ ಸಮಾರಂಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಲವು ಗಣ್ಯರು ಉಪಸ್ಥಿತರಿದ್ದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಹೆಚ್.ಸಿ ಜಯಮುತ್ತು, ಕನಕಪುರ ತಾಲ್ಲೂಕು ಅಧ್ಯಕ್ಷ ನಾಗರಾಜ್, BLA-2 ಅಧ್ಯಕ್ಷ ಚಿನ್ನಸ್ವಾಮಿ, ಜೆಡಿಎಸ್ ವಕ್ತಾರ ಹೆಚ್.ಎನ್ದೇವರಾಜು, ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ್, ಮುಖಂಡರುಗಳಾದ ರಾಜೇಶ್, ಪುಟ್ಟರಾಜು, ಶಿವಕುಮಾರ್, ಕಬ್ಬಾಳೆಗೌಡ ಹಾಗೂ ತಾಲ್ಲೂಕಿನ ವಿವಿಧ ಘಟಕಗಳ ಪದಾಧಿಕಾರಿಗಳು, ಮಹಿಳಾ ಮುಖಂಡರು ಮತ್ತು ನೂರಾರು ಸಂಖ್ಯೆಯ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

