ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಇದೇ ಸೆ. 15 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದು, ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು, ಚಿತ್ರದುರ್ಗ ಜಿಲ್ಲೆಯಲ್ಲಿ 135 ಕಿ.ಮೀ. ಮಾನವ ಸರಪಳಿ ನಿರ್ಮಿಸಲು ಈಗಾಗಲೆ ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದ್ದಾರೆ.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಮುಖ್ಯಮಂತ್ರಿಯವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತಿ ವರ್ಷ ಸೆ. 15 ರಂದು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ರಾಜ್ಯಾದ್ಯಂತ ಓದುವಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ರಾಜ್ಯದಲ್ಲಿ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸಿ, ಏಕಕಾಲಕ್ಕೆ ಸಂವಿಧಾನ ಪೀಠಿಕೆ ವಾಚನ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರುಗಳು ಆಸಕ್ತಿ ವಹಿಸಿ, ಆಯಾ ಜಿಲ್ಲೆಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸಂವಿಧಾನದ ಮಹತ್ವದ ಬಗ್ಗೆ ಯುವಪೀಳಿಗೆಗೆ ಹೆಚ್ಚಿನ ಜಾಗೃತಿ ಮೂಡಿಸಿ, ಎಲ್ಲ ಸಮುದಾಯ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.
ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರು ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವು ದೇಶಾಭಿಮಾನ ಬಿಂಬಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಎಲ್ಲ ಜಿಲ್ಲೆಗಳಲ್ಲೂ ಅಂದು ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದ ಯಶಸ್ವಿಗೆ ಆಯಾ ಜಿಲ್ಲಾಧಿಕಾರಿಗಳು ವಿವಿಧ ಸಂಘಸಂಸ್ಥೆಗಳು, ಸಂಘಟನೆಗಳು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಸೂಚನೆ ನೀಡಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ರಾಜ್ಯದಲ್ಲಿ ಏರ್ಪಡಿಸಲಾಗುತ್ತಿರುವ ಮಾನವ ಸರಪಳಿ ಕಾರ್ಯಕ್ರಮ ಸಂದರ್ಭವನ್ನು ಬಳಸಿಕೊಂಡು ಅರಣ್ಯ ಇಲಾಖೆಯಿಂದ ರಾಜ್ಯದಲ್ಲಿ ಒಟ್ಟು 10 ಲಕ್ಷ ಸಸಿಗಳನ್ನು ನೆಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 135 ಕಿ.ಮೀ. ನಷ್ಟು ಮಾನವ ಸರಪಳಿ ನಿರ್ಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ. ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಿದ್ಧತಾ ಸಭೆಯನ್ನು ನಡೆಸಲಾಗಿದ್ದು, ಯಶಸ್ವಿಗೆ ಅಗತ್ಯವಿರುವ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದೇ ಸೆ. 09 ರಂದು ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರಿನಲ್ಲಿ ಮತ್ತೊಂದು ಬಾರಿ ಸಿದ್ಧತಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್‍ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪೌರಾಡಳಿತ ಸಚಿವ ಡಾ. ರಹೀಂ ಖಾನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕ್ಯಾ. ಮಣಿವಣ್ಣನ್ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಚಿತ್ರದುರ್ಗ ಜಿಲ್ಲೆಯಿಂದ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.