ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 140 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅವರು ಮೊಳಕಾಲ್ಮುರು ಮತ್ತು ಬಳ್ಳಾರಿ ಗಡಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊಳಕಾಲ್ಮುರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕರ್ನಾಟಕ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಅಂದರೆ ಬೀದರ್‌ನಿಂದ ಚಾಮರಾಜನಗರ ವರೆಗೆ, ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲು ಸರ್ಕಾರ ನಿರ್ಧರಿಸಿದೆ. ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗ. ಆದ್ದರಿಂದ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಪ್ರಜಾಪ್ರಭುತ್ವ ಗೌರವಿಸುವಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯವರೆಗೆ ಒಟ್ಟು 140 ಕಿ.ಮೀ ದೂರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಪರಿಚಯಿಸಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಉಪ ಕಾರ್ಯದರ್ಶಿ ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ತಾಲ್ಲೂಕು ಪಂಚಾಯಿತಿ ಇಒ ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.