ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಶೋಷಣೆಗೆ ಒಳಗಾಗಿರುವವರಿಗೆ ಒಳ ಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪು ನೀಡಿದ್ದು ಈ ತೀರ್ಪನ್ನು ಮರುಪರಿಶೀಲಿಸಲು ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಂವಿಧಾನ ಪೀಠ, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.
ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾದ ಅರ್ಜಿಗಳ ವಾರಸುದಾರರು ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ ಆಗಸ್ಟ್ 1 ರಂದು ಒಳಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಗಳು ಎಸ್ ಸಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಬಹುದು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯೊಳಗೆ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿದ್ದನ್ನು ಸ್ಮರಿಸಬಹುದಾಗಿದೆ.