ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ರಾಜ್ಯದ ಹಲವು ಆರ್ಟಿಓ ಕಚೇರಿಗಳು ಮತ್ತು ಚೆಕ್ ಪೋಸ್ಟ್ಗಳ ಮೇಲೆ ದಾಳಿ ಮಾಡಿ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡಿದಿದ್ದಾರೆ.
ರಾಜ್ಯದ ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.
ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿಯ ಆರ್ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ತಂಡ ದಾಳಿ ಮಾಡಿದೆ.
ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿಗಳ ವಿರುದ್ಧ ಸಾಕಷ್ಟು ದೂರು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸುಮೋಟೋ ಕೇಸ್ ದಾಖಲಿಸಿಕೊಂಡು ದಾಳಿ ಮಾಡಿದ್ದಾರೆ. ಎರಡೂ ಚೆಕ್ ಪೋಸ್ಟ್ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ.
ಅದೇ ರೀತಿ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್ಟಿಓ ಚೆಕ್ ಪೋಸ್ಟ್ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿದ್ದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೀದರ್ ಮತ್ತು ಡಿವೈಎಸ್ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಬಳ್ಳಾರಿ ತಾಲೂಕಿನ ಪಿಡಿಹಳ್ಳಿ ಸಮೀಪದ ಆರ್ಟಿಓ ಚೆಕ್‌ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದ್ದು ದಾಳಿ ಮಾಡಿದ ಅಧಿಕಾರಿಗಳು ಚೆಕ್ ಪೋಸ್ಟ್ನಲ್ಲಿದ್ದ ಹಣವನ್ನು ವಶಪಡಿಸಿಕೊಂಡು ಶೋಧ ಕಾರ್ಯ ಮುಂದುವರೆಸಿದ್ದಾರೆ.