ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಲ್ಪಸಂಖ್ಯಾತರ ಮೊರಾರ್ಜಿ ಶಾಲೆ, ಪರಿಶಿಷ್ಟ ಪಂಗಡದ ಮೊರಾರ್ಜಿ ಮಾದರಿ ವಸತಿ ಶಾಲೆಗಳ ಅವ್ಯವಸ್ಥೆಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕೆಂಡಾಮಂಡಲವಾದರು.
ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ತ್ರೈ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅನುಪಾಲನಾ ವರದಿ ಪರಿಶೀಲನೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಏಕಲವ್ಯ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗಳಲ್ಲಿ ಸ್ವಚ್ಛತೆ ಇಲ್ಲ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಗುಣಮಟ್ಟದ ಆಹಾರ ನೀಡುತ್ತಿಲ್ಲ, ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಇಲ್ಲ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡರು.
ಮೊರಾರ್ಜಿ ಶಾಲೆಗಳ ಉದ್ದೇಶವೇ ಈಡೇರಿಲ್ಲ. ಸ್ವಂತ ಕಟ್ಟಡ ನಿರ್ಮಾಣಕ್ಕೆ ನೂರಾರು ಕೋಟಿ ರೂ.ಖರ್ಚು ಮಾಡಲಾಗಿದೆ. ಸಾಕಷ್ಟು ಅನುದಾನ ದುರುಪಯೋಗ ಆಗುತ್ತಿದೆ. ಮಕ್ಕಳಿಗೆ ಅಗತ್ಯ ಸೌಲಭ್ಯ ನೀಡುತ್ತಿಲ್ಲ. ನಿಮಗೆಲ್ಲಾ ನಾಚಿಕೆ ಆಗಬೇಕು ಎಂದು ಸಚಿವರು ಅಧಿಕಾರಿಗಳ ವಿರುದ್ಧ ತೀವ್ರ ತರಾಟೆ ತೆಗೆದುಕೊಂಡರು.
ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಗಳ ವ್ಯವಸ್ಥೆ ಇದೆ. ಸಕಲ ಸೌಲಭ್ಯಗಳನ್ನು ನೀಡಲಾಗಿದೆ. ಬದ್ಧತೆ ಇಲ್ಲದ ಶಿಕ್ಷಕರಿಂದಾಗಿ ಕಡಿಮೆ ಫಲಿತಾಂಶ ಬಂದಿದೆ. ಮೊರಾರ್ಜಿ ಶಾಲೆಗಳು ನೇರವಾಗಿ ಕ್ರೈಸ್ ಸಂಸ್ಥೆ ಅಧೀನದಲ್ಲಿವೆ ಎಂದು ಆಯಾಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮೌನ ವಹಿಸುವಂತಿಲ್ಲ. ಜಿಪಂ ಸಿಇಒ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದು ಸಚಿವರು ತಾಕೀತು ಮಾಡಿದರು.
ಶಾಲೆಯಲ್ಲಿ 6ರಿಂದ 10ನೆ ತರಗತಿವರೆಗಿನ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು, ಲೋಪದೋಷ ಕಂಡು ಬಂದರೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.
ಸರ್ಕಾರ ಎಲ್ಲ ಸೌಲಭ್ಯ ಒದಗಿಸುತ್ತದೆ ಮತ್ತು ಉತ್ತಮ ಶಿಕ್ಷಣ ದೊರಕುತ್ತದೆ ಎಂದು ಜನರು ತಮ್ಮ ಮಕ್ಕಳನ್ನು ಇಂತಹ ಶಾಲೆಗಳಿಗೆ ಸೇರ್ಪಡೆ ಮಾಡುತ್ತಾರೆ. ಆದರೆ ಇಲ್ಲಿ ಅಂತಹ ವ್ಯವಸ್ಥೆ ಇಲ್ಲ ಎಂದು ಪಾಲಕರು ದೂರುತ್ತಾರೆ ಎಂದು ಸಚಿವರು ಕಿಡಿ ಕಾರಿದರು.
ಸಚಿವರ ಆಕ್ಷೇಪಗಳಿಗೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಧ್ವನಿಗೂಡಿಸಿದರು.