ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಅವರು ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ.
ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಪರಿಶಿಷ್ಟ ಪಂಗಡ ಸಮುದಾಯಗಳ ಜೊತೆಗಿನ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಪ ಹೇಳಿಕೆ ನೀಡಿದ್ದಾರೆ.
ವಾಲ್ಮೀಕಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಒದಗಿಸಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಮರುಹಂಚಿಕೆ ಮಾಡಲಾಗುವುದು.
ಜೊತೆಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಉಂಟಾಗುತ್ತಿರುವ ಗೊಂದಲವನ್ನು ನಿವಾರಣೆ ಮಾಡಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.