ಚಂದ್ರಳ್ಳಿ ನ್ಯೂಸ್, ಬೆಂಗಳೂರು:
ಪ್ರಸಕ್ತ ಸಾಲಿನ ಹಿಂಗಾರು ಅವಧಿಯಲ್ಲಿ ಉಂಟಾದ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.
ಮುಂಗಾರು ಅವಧಿಯಲ್ಲಿ ಅಂದರೆ ಜೂನ್1ರಿಂದ ಸೆಪ್ಟಂಬರ್30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ 978 ಮಿ.ಮೀ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲೂ ಶೇ.15ರಷ್ಟು ಹೆಚ್ಚುವರಿ ಮಳೆಯಾಗಿತ್ತು.
ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್ನಿಂದ ಡಿಸೆಂಬರ್ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ.
ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941 ಹೆಕ್ಟೇರ್ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937 ಹೆಕ್ಟೇರ್ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದರು.
ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು.
ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದೆ.
ಮುಂಗಾರಿನಲ್ಲಿ 80ಸಾವಿರ ಹೆಕ್ಟೇರ್ಬೆಳೆ ಹಾನಿಯಾಗಿದ್ದು, ಬೆಳೆ ಪರಿಹಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ರಾಜ್ಯದಲ್ಲಿ ಪ್ರಸ್ತುತ 63,647 ಕೆರೆ, ಕಲ್ಯಾಣಿಗಳ ಅಭಿವೃದ್ದಿ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ. ಅತಿವೃಷ್ಟಿಯಿಂದಾಗಿ 12,553 ಕಿಮೀ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ 1,106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ ಉಂಟಾಗಿರುವ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು.
ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ.
ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ ಅವರು ತಿಳಿಸಿದರು.
ಬೆಂಗಳೂರು ನಗರದಲ್ಲಿ ಈ ವರ್ಷ ಅಕ್ಟೋಬರ್ತಿಂಗಳಲ್ಲಿ 275 ಮಿಮೀ ಮಳೆಯಾಗಿದ್ದು, ಇದು 3ನೇ ಅತಿ ಹೆಚ್ಚು ಮಳೆಯಾಗಿದೆ. 2005ರಲ್ಲಿ ಈ ಅವಧಿಯಲ್ಲಿ 407 ಮೀಮೀ ಮಳೆಯಾಗಿತ್ತು.
ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ರಾಜಕಾಲುವೆ ಒತ್ತುವರಿ ತೆರವು, ತಡೆಗೋಡೆ ನಿರ್ಮಾಣ ಕುರಿತು ಆದೇಶ ನೀಡಿದ್ದೆ. ಆದರೆ ಈ ಕಾರ್ಯ ಇನ್ನೂ ಪೂರ್ಣಗೊಳಿಸದ ಕಾರಣ ಪ್ರತಿ ವರ್ಷ ಮಳೆ ಬಂದ ತಕ್ಷಣ ಅನಾಹುತಗಳು ಸಂಭವಿಸುತ್ತಿವೆ. ರಾಜಕಾಲುವೆಗಳ ಅತಿಕ್ರಮಣ ತೆರವು ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ವಿಶ್ವಬ್ಯಾಂಕ್ಸಂಸ್ಥೆಯು ಬೆಂಗಳೂರು ನಗರದಲ್ಲಿ ಬಾಕಿ ಉಳಿದಿರುವ 173 ಕಿಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸುವ ಯೋಜನೆಗೆ ಹಾಗೂ 80 ಕಿಮೀ ಉದ್ದದ ಕಲ್ಲುಕಟ್ಟಡದ ರಾಜಕಾಲುವೆಗಳ ಸಬಲೀಕರಣ ಯೋಜನೆಗೆ ರೂ.2ಸಾವಿರ ಕೋಟಿ ಆರ್ಥಿಕ ನೆರವು ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ.
ಈ ಯೋಜನೆಯ ವಿಸ್ತೃತ ಯೋಜನಾ ವರದಿಯ ಅಂದಾಜು ಪಟ್ಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಟೆಂಡರ್ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಮುಂದಿನ ವರ್ಷದ ಆರಂಭದ ಒಳಗಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.
ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.
ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ವತಿಯಿಂದ ರಾಜಕಾಲುವೆಗಳ ಕಿರು ಸೇತುವೆಗಳ ಅಗಲೀಕರಣ ಮತ್ತು ಕೆರೆಗಳ ಅಭಿವೃದ್ಧಿಗಾಗಿ ರೂ.275 ಕೋಟಿ ಕ್ರಿಯಾ ಯೋಜನೆ ಅನುಮೋದಿಸಲಾಗಿದೆ.
ಕೆರೆಗಳಿಗೆ ರೂ.50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ರೂ. 669 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಬಾಕಿ ಇರುವ 173 ಕಿ.ಮೀ ರಾಜಕಾಲುವೆ ನಿರ್ಮಾಣ ಮಾಡಲು 2,000 ಕೋಟಿ ಹಣ ಆರ್ಥಿಕ ನೆರವು ನೀಡಲು ವಿಶ್ವಸಂಸ್ಥೆ ಒಪ್ಪಿಕೊಂಡಿದೆ. 3-4 ತಿಂಗಳಲ್ಲಿ ಇದು ಫೈನಲ್ ಆಗಲಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಈ ಯೋಜನಾ ವರದಿಗೆ ಒಪ್ಪಿಗೆ ಪಡೆಯಲಾಗುವುದು.
NDMF ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ 175 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲು ಸೂಚನೆ ನೀಡಲಾಗಿದೆ. ತೂಬು ಕಾಲುವೆಗೆ 85 ಕೋಟಿ, ಬೆಂಗಳೂರು ನಗರ ರಸ್ತೆ ನಿರ್ಮಾಣಕ್ಕಾಗಿ 165 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈಗ 14 ಸಾವಿರ ಗುಂಡಿ ಮುಚ್ಚಿದ್ದೀವಿ. ಮುಚ್ಚಿದ ಬಳಿಕ ಮತ್ತಷ್ಟು ಮಳೆ ಬಂದಿದ್ದರಿಂದ ಮತ್ತೆ ಗುಂಡಿ ಆಗಿವೆ. ಇವನ್ನೂ ಮುಚ್ಚಲು ಸೂಚನೆ ನೀಡಲಾಗಿದೆ. ಬೆಂಗಳೂರಿಗೆ ಬಂದಿದ್ದ ವಿಶ್ವ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. 5,000 ಕೋಟಿ ನೆರವು ನೀಡಲು ಒಪ್ಪಿದ್ದಾರೆ. ಇದರಲ್ಲಿ 3,500 ಕೋಟಿ ಬೆಂಗಳೂರಿಗೆ ಖರ್ಚು ಮಾಡಲಾಗುವುದು.
ನಗರದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ತಡೆಗಟ್ಟಲು ಹೊಸ ಕಠಿಣ ಕಾನೂನು ತಂದು ಬಿಬಿಎಂಪಿ, ಬಿಡಿಎ, ಬಿಎಂಆರ್ಡಿಎ ಗೆ ಹೆಚ್ಚು ಅಧಿಕಾರ ನೀಡಲು ನಿರ್ಧರಿಸಲಾಗಿದೆ. ಅಕ್ರಮ ನಿರ್ಮಾಣ, ಇದರಿಂದ ಆಗುವ ಅನಾಹುತ ತಡೆಯಲು ಕಾನೂನು ಬಿಗಿಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾರಿದ್ದರು.