ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ.
ನಾನು ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು
ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ , ಹಿಂದೂ, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.
ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟೀಸು ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.