ಸಚಿವ ಜಮೀರ್ ನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ವಕ್ಫ್ ಬೋರ್ಡ್ ನಿಂದ ರೈತರ ಭೂಮಿಯ ರಕ್ಷಣೆ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

  ಈ ವೇಳೆ ಮಾತನಾಡಿದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು.

  ಒಂದು ಕೋಮಿನ ಓಲೈಕೆಗಾಗಿ ರಾಜ್ಯದ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿರುವ ಅಲ್ಪಸಂಖ್ಯಾತ ಖಾತೆ ಸಚಿವರಾದ ಜಮೀರ್ ಅಹ್ಮದ್ ಅವರು ” ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಸೂಚನೆಯಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ” ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಒತ್ತಡವನ್ನು ಹೇರುತ್ತಿದ್ದಾರೆ.

ಇದರ ಫಲವಾಗಿ ಕರ್ನಾಟಕ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ. ಆಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

  ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಅಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ, ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ರಚನಾತ್ಮಕ ಪ್ರತಿಪಕ್ಷವಾಗಿ ನಾವು ರೈತರ ಪರವಾಗಿ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ಧುಮುಕಿದ್ದೇವೆ . ರಾಜ್ಯದಾದ್ಯಂತ ನಮ್ಮ ಪಕ್ಷ ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಎಲ್ಲ ತಹಶೀಲ್ದಾರರ ಕಛೇರಿಗಳ ಮುಂದೆ ನೊಂದ ರೈತರನ್ನೊಳಗೊಂಡಂತೆ ಬೃಹತ್ ಸಂಖ್ಯೆಯಲ್ಲಿ ಹೋರಾಟವನ್ನು ರೂಪಿಸಿದ್ದೇವೆ. 

  ಮುಖ್ಯಮಂತ್ರಿಗಳು ಈ ಕೂಡಲೇ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಆಕ್ರಮವಾಗಿ ಈಗಾಗಲೇ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ಪಹಣಿಗಳಲ್ಲಿ ನಮೂದಿಸಿರುವ ಪಹಣಿಗಳನ್ನು ಈ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿದ ಅವರು ಯಾವುದೇ ಸಂದರ್ಭದಲ್ಲಿ ರೈತರ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 

 ರಾಜ್ಯ ಸರ್ಕಾರ ಹಾಗೂ ಅಲ್ಪಸಂಖ್ಯಾತ ಸಚಿವ ಜಮೀರ್ ಅಹಮ್ಮದ್ ಅವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರ ಮೂಲಕ ಸಿಎಂ ಸಿದ್ದರಾಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

  ಪ್ರತಿಭಟನೆಯಲ್ಲಿ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ, ಕಾರ್ಯದರ್ಶಿ ಆರ್‌.ಗೋಪಿ, ನಗರಸಭಾ ಸದಸ್ಯ ಬಂತಿ ವೆಂಕಟೇಶ್ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಾಲ್ಕು ತಾಲ್ಲೂಕಿನ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯ ಉಪಸ್ಥಿತರಿದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";